ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವಿರುದ್ಧ ಹೋರಾಟದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದರೆ ಮಾತ್ರ ಈ ರೋಗವನ್ನು ಸಂಪೂರ್ಣವಾಗಿ ಹೊಡೆದೋಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಸ್ಕ್ ಡೇ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಗೋಪಿ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಕೊರೋನಾ ಹರಡುವಿಕೆಯನ್ನು ಇದುವರೆಗೆ ಎಲ್ಲರ ಸಹಕಾರದಿಂದ ನಾವು ಯಶಸ್ವಿಯಾಗಿ ತಡೆಯಲು ಸಾಧ್ಯವಾಗಿದೆ. ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಹಾಗೂ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೊರೋನಾ ಹರಡುವಿಕೆಯನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಗಿದೆ. ಸಾರ್ವಜನಿಕರ ಸಹಯೋಗದಿಂದ ಮಾತ್ರ ಕೊರೋನಾ ಹರಡುವುದನ್ನು ತಡೆಗಟ್ಟಬಹುದಾಗಿದೆ. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಮಾಸ್ಕ್ ಧರಿಸುವುದರಿಂದ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡುವುದರಿಂದ ಶೇ.50ರಷ್ಟು ಕೊರೋನಾ ಹರಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹಾಗೂ ತಮ್ಮ ಕೈಗಳನ್ನು ಆಗಿಂದಾಗ್ಗೆ ಸಾಬೂನಿನಿಂದ ತೊಳೆಯುವ ಮೂಲಕ ಕೊರೋನಾ ವೈರಸ್ ಹರಡುವ ಸಾಧ್ಯತೆಯನ್ನು ಇಲ್ಲವಾಗಿಸಬಹುದು ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರ ಗಣ್ಯರು ಜಾಥಾದಲ್ಲಿ ಭಾಗವಹಿಸಿದ್ದರು.
Get In Touch With Us info@kalpa.news Whatsapp: 9481252093
Discussion about this post