ಕಲ್ಪ ಮೀಡಿಯಾ ಹೌಸ್ | ದಾವೋಸ್ |
ಸ್ವಿಟ್ಜರ್ಲೆಂಡಿನ Switzerland ಈ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ Minister MB Patil ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರದಂದು ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, `ಈ ಯೋಜನೆಗಳಲ್ಲಿ ವೆಬ್ ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ ಸ್ಥಾಪಿಸಲಿರುವ 100 ಮೆಗಾವ್ಯಾಟ್ ಸಾಮರ್ಥ್ಯದ, 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ಯೋಜನೆ ಕೂಡ ಸೇರಿದೆ. ಇದಲ್ಲದೆ ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಹ್ಯೂಲೆಟ್ ಪೆಕಾರ್ಡ್ (ಎಚ್.ಪಿ), ಹನಿವೆಲ್, ಐನಾಕ್ಸ್, ವೋಲ್ವೋ, ನೆಸ್ಲೆ, ಕಾಯಿನ್ ಬೇಸ್, ಟಕೇಡಾ ಫಾರ್ಮಾ, ಬಿಎಲ್ ಆಗ್ರೋ ಇತ್ಯಾದಿ ಕಂಪನಿಗಳೊಂದಿಗೆ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ’ ಎಂದು ತಿಳಿಸಿದ್ದಾರೆ.

ಈ ಒಡಂಬಡಿಕೆಗಳು ಕಾರ್ಯರೂಪಕ್ಕೆ ಬರುವ ಮೂಲಕ ರಾಜ್ಯವು ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಕಾಣಲಿದೆ. ಜೊತೆಗೆ, ಮಾರುಕಟ್ಟೆಯಲ್ಲಿ ಇರುವ ಅವಕಾಶಗಳನ್ನು ಅತ್ಯಾಧುನಿಕ ಮೂಲಸೌಲಭ್ಯಗಳ ಮೂಲಕ ಗರಿಷ್ಠ ಮಟ್ಟದಲ್ಲಿ ಸದ್ಬಳಕೆ ಮಾಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ. ಈ ಹೂಡಿಕೆಗಳಿಂದ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಭಾಗಗಳು ಮುಂಚೂಣಿಗೆ ಬರಲಿದ್ದು, ಈ ಯೋಜನೆಗಳಿಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ವಿವರಿಸಿದ್ದಾರೆ.

ಹನಿವೆಲ್ ಕಂಪನಿಯು ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಮೂಲಕ ಸಂಚಾರ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಮುಂತಾದುವುಗಳನ್ನು ನಿಭಾಯಿಸಲಿದೆ. ಲುಲು ಸಮೂಹವು 300 ಕೋಟಿ ರೂ. ಹೂಡಿಕೆಯೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಆಹಾರ ಸಂಸ್ಕರಣೆಯಲ್ಲಿ ತೊಡಗಿಕೊಳ್ಳಲು ಉತ್ಸುಕವಾಗಿದೆ. ಹಾಗೆಯೇ ಟಕೇಡಾ ಫಾರ್ಮಾ, ಬೆಂಗಳೂರಿನಲ್ಲಿ ತನ್ನ ಗ್ಲೋಬಲ್ ಕೆಪಾಸಿಟಿ ಸೆಂಟರ್ ತೆರೆಯಲು ಮುಂದೆ ಬಂದಿದೆ ಎಂದು ಪಾಟೀಲ ತಿಳಿಸಿದ್ದಾರೆ.

ದಾವೋಸ್ ಗೆ ತೆರಳಿರುವ ನಿಯೋಗದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್,ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಇದ್ದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post