ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಸ್ಥಳೀಯ ರೈತರಿಗೆ ನೆರವಾಗುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಬದಲು ಆರ್ಥಿಕವಾಗಿ ನಷ್ಟದಲ್ಲಿರುವ ರಾಜ್ಯದ ಹೊರ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳಿಗೆ 95 ಕೋಟಿಗಳಿಗೂ ಹೆಚ್ಚಿನ ಸಾಲ ನೀಡಿರುವುದು ಸೇರಿದಂತೆ ಅನೇಕ ಅಕ್ರಮಗಳನ್ನು ಎಸಗಿರುವ ಬ್ಯಾಂಕಿನ ವ್ಯವಹಾರವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ಸರ್ಕಾರದ ಗಮನಸೆಳೆಯಲು ಇಂದು ನಡೆದ ಜಿಲ್ಲಾ ಪಂಚಾಯಿತಿ ತ್ರೆûಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 2020ರ ಮಾರ್ಚ್ ಅಂತ್ಯದವರೆಗಿನ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿತ್ತು. ಶಾಸಕ ಆರಗ ಜ್ಞಾನೇಂದ್ರ ಅವರ ವಿಷಯ ಮಂಡನೆಯ ನಂತರ ಈ ನಿರ್ಣಯವನ್ನು ಕೈಗೊಳ್ಳಲಾಯಿತು.
ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯಡಿ ಗ್ರಾಮೀಣ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರು, ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ನೀಡುವಂತೆ ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.
ತುಂಗಾ ಮತ್ತು ಮಾಲತಿ ನದಿ ದಂಡೆಯ ಇಕ್ಕೆಲಗಳಲ್ಲಿ ಬರುವ ಗ್ರಾಮಗಳಿಗೆ ನದಿಯಿಂದ ನೇರವಾಗಿ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ನದಿಯ ನೀರನ್ನು ಸಂಸ್ಕರಿಸಿ ಒದಗಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಅಭಿಯಂತರರಿಗೆ ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ತೀವ್ರ ಹಾನಿಗೊಳಗಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳನ್ನು ನೆಲಸಮಗೊಳಿಸಿ ಮರುನಿರ್ಮಾಣಕ್ಕಾಗಿ ಸರ್ಕಾರವು ಈಗಾಗಲೇ 10ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 52ಶಾಲೆಗಳ 92ಕೊಠಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿತ್ತು. ಪ್ರಸ್ತುತ ಕೆಲವು ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯ ವಿವಿಧ ನಿಗಮ-ಮಂಡಳಿಗಳಲ್ಲಿ ಅನುಷ್ಠಾನಗೊಳಿಸಲಾಗಿರುವ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬವಾಗುತ್ತಿದ್ದು, ನಿರೀಕ್ಷಿತ ಕೆಲಸ-ಕಾರ್ಯಗಳು ನಿಗಧಿತ ಅವಧಿಯೊಳಗಾಗಿ ಪೂರ್ಣಗೊಳ್ಳುತ್ತಿಲ್ಲ ಅದಕ್ಕಾಗಿ ನಿಗಮ-ಮಂಡಳಿಯ ಅಧಿಕಾರಿಗಳ ಸಭೆಯನ್ನು ಕರೆದು ಈವರೆಗೆ ಆಗಿರುವ ಪ್ರಗತಿ ಮಾಹಿತಿಯನ್ನು ಪಡೆಯುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಆಯ್ದ 120ಸ್ಥಳಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದಕ್ಕೆ ಅಗತ್ಯವಾಗಿರುವ ಸ್ಥಳಾವಕಾಶವನ್ನು ಒಂದು ವಾರದೊಳಗಾಗಿ ಒದಗಿಸಿ, ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಅಲ್ಲದೇ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳ ಪ್ರಗತಿ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ುಮಾರ್, ಉಪಾಧ್ಯಕ್ಷೆ ವೇದಾವಿಜಯಕುಮಾರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಒ.ಎಂ.ಎಲ್.ವೈಶಾಲಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post