ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ |
ಎಸ್.ಪಿ. ಬಾಲಸುಬ್ರಹ್ಮಣ್ಯಂ… ಇಡಿಯ ವಿಶ್ವ ಕಂಡು ಕೇಳರಿಯದ ರೀತಿಯಲ್ಲಿ ಗಾನ ಸಾಮ್ರಾಜ್ಯದ ಸಾಮ್ರಾಟರಾಗಿ ವಿಜೃಂಭಿಸಿ, ದಾಖಲೆಗಳ ಸರದಾರರಾಗಿ ವೈಭವಿಸಿ, ನಾಲ್ಕು ದಶಕಗಳ ಕಾಲ ಭಾರತೀಯ ಸ್ವರ ಲೋಕವನ್ನು ಆಳಿದ ಗಾನ ಮಾಂತ್ರಿಕ. ಬಹುಷಃ ಈ ಹೆಸರು ಕೇಳದ ಯಾವುದೇ ಭಾರತೀಯ ಬಹುತೇಕ ಇರಲಿಕ್ಕಿಲ್ಲ. ಇಂತಹ ಶ್ರೇಷ್ಠ ವ್ಯಕ್ತಿಯ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದ್ದು, ಗಾನ ಗಾರುಡಿಗನ ಜೀವನ ಸಾಧನೆ ಕುರಿತಾಗಿ ಒಂದಷ್ಟು ಮಾಹಿತಿ…
ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ 1946ರ ಜೂನ್ 4ರಂದು ಜನಿಸಿದ ಎಸ್’ಪಿಬಿ ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ. ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.

1966ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ’ಶ್ರೀ ಶ್ರೀಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ ’ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ’.

ಭಾರತ ಮಾತ್ರವಲ್ಲ ಇಡಿಯ ವಿಶ್ವದ ಚಿತ್ರರಂಗ ಕಂಡ ಸ್ವರ ಸಾಮ್ರಾಟ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಾಧನೆಗೆ ಅವರೇ ಸಾಟಿ.
ಇಡಿಯ ವಿಶ್ವದಲ್ಲಿ 16ಕ್ಕೂ ಅಧಿಕ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ ಏಕೈಕ ಸರದಾರ ಎಂದರೆ ಅದು ಎಸ್’ಪಿಬಿ ಮಾತ್ರ. ಹಿನ್ನೆಲೆ ಗಾಯನ ಮಾತ್ರವಲ್ಲ, ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಮಾತುಗಾರರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ.
ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು. ಬಾಲು ಅವರ ಸಾಧನೆಗೆ ಅವರನ್ನು ಅರಸಿ ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು, 25 ಬಾರಿ ಆಂಧ್ರಪ್ರದೇಶ ಸರ್ಕಾರದ ’ನಂದಿ’ ಪ್ರಶಸ್ತಿ ಸಂದಿದೆ. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ ಇವರಾಗಿದ್ದು, ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್ ಸಂದಿದೆ.
ಒಂದೇ ದಿನ 19 ಹಾಡುಗಳನ್ನು ರೆಕಾರ್ಡ್ ಮಾಡಿದ್ದ ಸ್ವರ ಸಾಮ್ರಾಟ್
ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಬ ಸ್ವರ ಸಾಮ್ರಾಟ್ ಭಾರತೀಯ ಚಿತ್ರರಂಗ ಹಾಗೂ ಗಾನ ಲೋಕ ಕಂಡ ಸಂಗೀತದ ಮೇರು ಪರ್ವತ. ಬಹುಷಃ ಭವಿಷ್ಯದಲ್ಲಿ ಇಂತಹ ಮೇರು ಗಾಯಕರನ್ನು ಭಾರತ ಮತ್ತೆ ಕಾಣಲು ಸಾಧ್ಯವೇ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ.

ಬಾಲು ಚಿತ್ರರಂಗಕ್ಕೆ ಬಂದು ಈ ಎಲ್ಲ ಭಾಷೆಗಳಿಗೂ ಸಾರ್ವಭೌಮರಾಗಿಬಿಟ್ಟರು. ಒಮ್ಮೆ ಅವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಧ್ವನಿ ಮುದ್ರಿಸಿದ್ದರು. ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿ ಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು. ಇದು ಎಸ್’ಪಿ.ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆ, ಅವರಿಗಿರುವ ವೈಶಾಲ್ಯತೆಗಳಿಗಿರುವ ನಿದರ್ಶನ. ಸಂಗೀತ ಪ್ರಧಾನವಾದ ಭಾರತೀಯ ಚಿತ್ರರಂಗದಲ್ಲಿ ಒಂದು ರೀತಿಯಲ್ಲಿ ಹಿನ್ನೆಲೆ ಗಾಯಕರು ಅಭಿನಯಿಸುವವರ ಆತ್ಮವಿದ್ದಂತೆ.
ಇದನ್ನೇ ಡಾ. ರಾಜ್ ಕುಮಾರ್ ಅವರು ಒಮ್ಮೆ ಪಿಬಿಎಸ್ ಬಗ್ಗೆ ಹೇಳುತ್ತಾ ಪಿಬಿಎಸ್ ನನ್ನ ಆತ್ಮ, ನಾನು ಶರೀರ ಎನ್ನುತ್ತಿದ್ದರು. ರಾಜ್’ಕಪೂರ್ ಮುಖೇಶ್ ಬಗ್ಗೆ ಇದನ್ನೇ ಹೇಳುತ್ತಿದ್ದರು. ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್.ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು.
ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು. ಅವರ ಧ್ವನಿಯ ಮೋಡಿ ಎಂ.ಜಿ. ರ್ಆ, ಶಿವಾಜಿ ಗಣೇಶನ್, ಎನ್.ಟಿ. ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post