ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ಬಸ್ ಪ್ರಯಾಣ (Bus Fare Hike) ದರವನ್ನು ಶೇ.23ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ (DS Arun) ಆಗ್ರಹಿಸಿದ್ದಾರೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ ಹಾಗೂ ಹಾಲಿನ ದರ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಸರ್ಕಾರ ಜನರ ಮೇಲೆ ಮತ್ತೊಂದು ಆರ್ಥಿಕ ಹೊರೆ ಹೊರಿಸಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೊರೆ ಜನರ ಮೇಲೆ ಬೇಡ
ಒಂದು ಕಡೆ ಉಚಿತ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಭರವಸೆಗಳನ್ನು ನೀಡುತ್ತಿರುವ ಸರ್ಕಾರ, ಮತ್ತೊಂದು ಕಡೆ ಸಾರ್ವಜನಿಕ ಸಾರಿಗೆ ಸೇರಿದಂತೆ ಅಗತ್ಯ ಸೇವೆಗಳ ದರ ಹೆಚ್ಚಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ವರ್ಗಾಯಿಸುವುದು ಸರಿಯಲ್ಲ ಎಂದು ಅರುಣ್ ಹೇಳಿದ್ದಾರೆ.
ಬಸ್ ಪ್ರಯಾಣ ದರ ಏರಿಕೆಯಿಂದ ಪ್ರತಿನಿತ್ಯ ಕೆಲಸಕ್ಕೆ ತೆರಳುವ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ತೊಂದರೆ ಅನುಭವಿಸಲಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ಗಳನ್ನೇ ಅವಲಂಬಿಸಿರುವ ಸಾವಿರಾರು ಜನರು ತಮ್ಮ ಮಾಸಿಕ ಆದಾಯದ ಹೆಚ್ಚಿನ ಭಾಗವನ್ನು ಪ್ರಯಾಣಕ್ಕಾಗಿ ವ್ಯಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ-ಚನ್ನಗಿರಿ ಪ್ರಯಾಣ ದರ ₹56ರಿಂದ ₹70ಕ್ಕೆ ಏರಿಕೆ
ದರ ಏರಿಕೆಯ ಪರಿಣಾಮವನ್ನು ವಿವರಿಸಿರುವ ಅವರು, ಶಿವಮೊಗ್ಗದಿಂದ ಚನ್ನಗಿರಿಗೆ ಈ ಹಿಂದೆ ₹56 ಇದ್ದ ಬಸ್ ಪ್ರಯಾಣ ದರ ಈಗ ₹70ಕ್ಕೆ ಏರಿಕೆಯಾಗಿದೆ. ಮತ್ತೊಂದು ಮಾರ್ಗದಲ್ಲಿ ₹105 ಇದ್ದ ದರ ₹140ಕ್ಕೆ ಹೆಚ್ಚಳವಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಈ ಹಿಂದೆ ₹90 ಇದ್ದ ಪ್ರಯಾಣ ದರ ಈಗ ₹102ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಇಂತಹ ದರ ಏರಿಕೆ ಪ್ರತಿನಿತ್ಯ ಪ್ರಯಾಣಿಸುವ ಜನರ ಜೇಬಿಗೆ ನೇರ ಹೊಡೆತ ನೀಡಲಿದೆ. ಅದರಲ್ಲೂ ಉದ್ಯೋಗ, ಶಿಕ್ಷಣ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ನಿತ್ಯ ಪ್ರಯಾಣಿಸುವವರಿಗೆ ಹೆಚ್ಚುವರಿ ಆರ್ಥಿಕ ಹೊರೆ ಉಂಟಾಗಲಿದೆ ಎಂದು ಹೇಳಿದ್ದಾರೆ.
DS Arun: ದರ ಏರಿಕೆಗೆ ಸರ್ಕಾರ ಕಾರಣ ನೀಡಲಿ
ಕೇಂದ್ರ ಸರ್ಕಾರ ಡೀಸೆಲ್ ಬೆಲೆಯನ್ನು ಹೆಚ್ಚಿಸದಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಏಕಾಏಕಿ ಹೆಚ್ಚಿಸಿರುವುದಕ್ಕೆ ಸಮರ್ಪಕ ಕಾರಣಗಳನ್ನು ಜನರ ಮುಂದಿಡಬೇಕು ಎಂದು ಅರುಣ್ ಒತ್ತಾಯಿಸಿದ್ದಾರೆ.
ಸಾರಿಗೆ ಸಂಸ್ಥೆಗಳ ನಿರ್ವಹಣೆ ಹಾಗೂ ಆರ್ಥಿಕ ಸದೃಢತೆಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ಬದಲು ಪ್ರಯಾಣಿಕರ ಮೇಲೆಯೇ ಹೆಚ್ಚುವರಿ ಹೊರೆ ಹಾಕುತ್ತಿರುವುದು ಸರಿಯಲ್ಲ. ಚುನಾವಣೆಯ ಸಂದರ್ಭದಲ್ಲಿ ಉಚಿತ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಒಂದೊಂದಾಗಿ ಸಾರ್ವಜನಿಕ ಸೇವೆಗಳ ದರ ಹೆಚ್ಚಿಸುತ್ತಿದೆ. ಸರ್ಕಾರ ತನ್ನ ಆರ್ಥಿಕ ನಿರ್ವಹಣೆಯ ಹೊಣೆಯನ್ನು ಜನಸಾಮಾನ್ಯರ ಮೇಲೆ ಹೊರಿಸಬಾರದು ಎಂದು ಹೇಳಿದ್ದಾರೆ.
Also Read>> ‘ಸದ್ವಿಚಾರ ದರ್ಶನ’ ಕೃತಿ ಲೋಕಾರ್ಪಣೆ, ಸಾಧಕರಿಗೆ ಪ್ರಶಸ್ತಿ: ನ.28ಕ್ಕೆ ಬೆಳಗಾವಿಯಲ್ಲಿ ಸಮಾರಂಭ
ದರ ಏರಿಕೆ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ
ರಾಜ್ಯ ಸರ್ಕಾರ ಕೂಡಲೇ ಬಸ್ ಪ್ರಯಾಣ ದರ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕು. ಜನಸಾಮಾನ್ಯರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ನೌಕರರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಜನರ ಮನವಿಗೆ ಸ್ಪಂದಿಸದಿದ್ದಲ್ಲಿ, ಬಸ್ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿ.ಎಸ್. ಅರುಣ್ ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









