ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಲೆನಾಡಿನ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದರೊಂದಿಗೆ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರು ಹೇಳಿದರು.
ಈ ಕುರಿತಂತೆ ಮಾತನಾಡಿರುವ ಅವರು, ಮಂಡಳಿಯ ವ್ಯಾಪ್ತಿಯ ಮಲೆನಾಡಿನ 13 ಜಿಲ್ಲೆಗಳು ಇದ್ದು 65 ವಿಧಾನಸಭಾ ಕ್ಷೇತ್ರಗಳು, 12 ಸಂಸದರು, 21 ವಿಧಾನಪರಿಷತ್ ಸದಸ್ಯರ ವ್ಯಾಪ್ತಿ ಒಳಗೊಂಡಿದೆ. ಪ್ರತಿ ಜಿಲ್ಲೆಗಳಲ್ಲಿ ವಿಭಿನ್ನ ಸಮಸ್ಯೆಗಳಿದ್ದು, ಮಲೆನಾಡಿನ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಲಾಗುವುದು. ರಸ್ತೆ ಮತ್ತು ಚರಂಡಿಗಳ ನಿರ್ಮಾಣಕ್ಕಿಂತ ಸಣ್ಣಪುಟ್ಟ ಚೆಕ್‌ಡ್ಯಾಂಗಳ ನಿರ್ಮಾಣ, ಮಲೆನಾಡಿನ ಪ್ರದೇಶದಲ್ಲಿ ಅತಿ ಅಗತ್ಯವಾಗಿರುವಂತಹ ಕಾಲುಸಂಕಗಳ ನಿರ್ಮಾಣ ಇತ್ಯಾದಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ಅಭಿವೃದ್ಧಿ ಚಟುವಟಿಕೆಗಳ ಜತೆಯಲ್ಲೇ ಪರಿಸರವನ್ನು ಸಂರಕ್ಷಿಸುವ ಹೊಣೆಗಾರಿಕೆಯೂ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಪರಿಸರಕ್ಕೆ ಧಕ್ಕೆಯಾಗದಂತೆ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಎಲ್ಲರ ಸಹಕಾರದೊಂದಿಗೆ ನಡೆಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಮಂಡಳಿಯಲ್ಲಿ 98 ಕೋಟಿ ರೂ. ಮೊತ್ತದ 1278 ಅಭಿವೃದ್ಧಿ ಕಾಮಗಾರಿಗಳು ಅನುಷ್ಟಾನಗೊಳ್ಳುತ್ತಿವೆ. ಇದರಲ್ಲಿ 813 ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳು, 155 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ, 19 ಕುಡಿಯುವ ನೀರಿನ ಕಾಮಗಾರಿಗಳು ಒಳಗೊಂಡಿವೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮಾತನಾಡಿ, ಮಲೆನಾಡಿನ ಸಮಸ್ಯೆಗಳನ್ನು ಚೆನ್ನಾಗಿ ಅರಿತುಕೊಂಡಿರುವ ಗುರುಮೂರ್ತಿಯವರಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಬಹುದು ಎಂದು ಹೇಳಿ ಶುಭ ಹಾರೈಸಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿವೆ. ಸುಮಾರು 2 ಸಾವಿರ ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗಳು ತ್ವರಿತಗತಿಯಲ್ಲಿ ಅನುಷ್ಟಾನಗೊಳ್ಳುತ್ತಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರೈಲ್ವೇ ಯೋಜನೆಗಳು, ಕಳಸವಳ್ಳಿ ಸಿಗಂದೂರು ಸೇತುವೆ, ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿ, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಸಾಧ್ಯವಾಗಿವೆ ಎಂದರು.
ಸಾಗರ ಶಾಸಕ ಹರತಾಳು ಹಾಲಪ್ಪ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಸೊರಬ ಕುಮಾರ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಮತ್ತಿತರ ಗಣ್ಯರು ಶುಭ ಹಾರೈಸಿದರು. ಶಾಸಕರಾದ ಅಶೋಕ ನಾಯ್ಕ, ಆಯನೂರು ಮಂಜುನಾಥ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣಪ್ಪ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.
Get In Touch With Us info@kalpa.news Whatsapp: 9481252093
Discussion about this post