ಬೆಳಗಾವಿ: ಪ್ರವಾಹದಿಂದಾಗಿ ರಾಜ್ಯದಲ್ಲಿ 10 ಸಾವಿರ ಕೋಟಿ ರೂಪಾಯಿ ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳು ವಿವರಿಸಿದರು.
ಕೇಂದ್ರ ಗೃಹಸಚಿವರು ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಬಳಿಕ ಸಾಂಬ್ರಾ ವಿಮಾನ ನಿಲ್ದಾಣ ದಲ್ಲಿ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಪ್ರವಾಹ ಬಾಧಿತ ಜಿಲ್ಲೆಗಳಲ್ಲಿ 4.81 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದ್ದು, 22431 ಮನೆಗಳ ಹಾನಿಯಾಗಿದೆ. ಪ್ರಾಥಮಿಕ ಸಮೀಕ್ಷೆಯ ಪ್ರಕಾರ 10 ಸಾವಿರ ಕೋಟಿ ರೂಪಾಯಿ ಹಾನಿ ಅಂದಾಜಿಸಲಾಗಿದೆ.
ಇಡೀ ರಾಜ್ಯದ ಪ್ರವಾಹ ಸ್ಥಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ.ವಿಜಯ್ ಭಾಸ್ಕರ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಿಸಿದರು.
19 ಎನ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಲಾಗಿದ್ದು, ಕೊಡುಗು ಜಿಲ್ಲೆಯಲ್ಲಿ ಇನ್ನೂ ಎರಡು ಹೆಲಿಕಾಪ್ಟರ್ ಅಗತ್ಯವಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಎರಡು ದಿನಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಿದೆ ಎಂದು ತಿಳಿಸಿದರು.
ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ತಿಳಿಸಿದರು.
ಛಾಯಾ ಚಿತ್ರಗಳ ವೀಕ್ಷಣೆ:
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಅನಾಹುತಗಳ ಛಾಯಾಚಿತ್ರ ಪ್ರದರ್ಶನವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ವೀಕ್ಷಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು, ಜಿಲ್ಲೆಯಲ್ಲಿ ಆಗಿರುವ ಹಾನಿಯ ಕುರಿತು ಮಾಹಿತಿಯನ್ನು ನೀಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.
Discussion about this post