ಭಾರತ ದೇಶ ಕಂಡ ಪ್ರಧಾನಿಗಳಲ್ಲಿ ಶ್ರೇಷ್ಠರು ಎಂದು ಪರಿಗಣಿಸಬಹುದಾದವರನ್ನು ಅಟಲ್ ಜೀ ಸಹ ಒಬ್ಬರು.
1996ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಮತಗಳನ್ನು ಪಡೆದು ಏಕ ಪಕ್ಷವಾಗಿ ಹೊರ ಹೊಮ್ಮಿತು. 519 ಸೀಟುಗಳ ಪೈಕಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಕಾಂಗ್ರೆಸ್ 140 ಹಾಗೂ ಬಿಜೆಪಿಯೇತರ, ಕಾಂಗ್ರೆಸ್ಸೇತರ ಪಕ್ಷಗಳ ಸಂಘ ಯುನೈಟೆಡ್ ಫ್ರಂಟ್ 192 ಸೀಟುಗಳನ್ನು ಗೆದ್ದುಕೊಂಡಿತು. ಹೆಚ್ಚು ಸೀಟು ಪಡೆದ ಏಕೈಕ ಪಕ್ಷವಾದ ಕಾರಣ ಬಿಜೆಪಿಗೆ ಸರ್ಕಾರ ರಚಿಸಲು ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಆಹ್ವಾನವಿತ್ತರು.
ಸ್ಥಳೀಯ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳು ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಬಹುದೆಂದು ಭಾವಿಸಿ ವಾಜಪೇಯಿ ಭಾರತದ ಹತ್ತನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಬಿಜೆಪಿ ನಾಯಕತ್ವದಲ್ಲಿ ಸರ್ಕಾರ ರಚನೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಆದರೆ ಯುನೈಟೆಡ್ ಫ್ರಂಟ್ ಬಹುಮತ ಸಾಧಿಸಲು ಕಾಂಗ್ರೆಸ್ ಅನ್ನು ಬಾಹ್ಯ ಬೆಂಬಲಕ್ಕಾಗಿ ಯಾಚಿಸಿತು.
ಕಾಂಗ್ರೆಸ್ ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದರಿಂದ ವಾಜಪೇಯಿ ಕೇಂದ್ರದಲ್ಲಿ ಬಹುಮತ ಸಾಧಿಸಲು ಸಾಧ್ಯವಾಗಲಿಲ್ಲ. ಯುನೈಟೆಡ್ ಫ್ರಂಟ್ ಎಚ್.ಡಿ. ದೇವೇಗೌಡರ ಮುಂದಾಳತ್ವದಲ್ಲಿ ಸರ್ಕಾರ ರಚನೆ ಮಾಡಲು ಮುಂದಾದಾಗ ಕೇವಲ ಹದಿಮೂರು ದಿನವಾಗಿದ್ದ ವಾಜಪೇಯಿ ಸರ್ಕಾರ ಪತನಗೊಂಡಿತು.
ಇನ್ನು, 1998 ರಲ್ಲಿ ಚುನಾವಣೆಗಳು ನಡೆದಾಗ ಮತ್ತೆ ಬಿಜೆಪಿಯೇ ಮಿಕ್ಕ ಪಕ್ಷಗಳಿಗಿಂತ ಮುನ್ನಡೆ ಸಾಧಿಸಿತಾದರೂ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಕೂಡಲೇ ಸಮಾನ ಮನಸ್ಕ ಪಕ್ಷಗಳ ಒಡಗೂಡಿ ಎನ್‌ಡಿಎ ಮೈತ್ರಿ ಕೂಟ ರಚಿಸಿತು. ಮೈತ್ರಿ ಕೂಟದ ಮೂಲಕ ಬಹುಮತ ಸಾಧಿಸಿದ ಕಾರಣ 10 ಮಾರ್ಚ್ 1998 ರಂದು ವಾಜಪೇಯಿ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಲಾಯಿತು.
ಈ ಅವಧಿಯಲ್ಲಿಯೇ ದೇಶ ಕಾರ್ಗಿಲ್ ಯುದ್ಧವನ್ನು ಎದುರಿಸಿತು. ಎನ್‌ಡಿಎ ಮೈತ್ರಿ ಕೂಟದಲ್ಲಿದ್ದ ಒಂದು ಮುಖ್ಯ ಪಕ್ಷ ತಮಿಳುನಾಡಿನ ಎಐಎಡಿಎಂಕೆ. 1999 ರಲ್ಲಿ ಬಿಜೆಪಿ ಪಕ್ಷವು ಜಯಲಲಿತಾ ಕೆಲವು ಭ್ರಷ್ಟಾಚಾರ ಸಂಬಂಧಿ ದೂರುಗಳಲ್ಲಿ ನಿಯಂತ್ರಣ ಕಾಯ್ದುಕೊಳ್ಳಲು ಹವಣಿಸಿರುವ ಬಗ್ಗೆ ಗಂಭೀರ ಆರೋಪ ಮಾಡಿತು. ಎನ್‌ಡಿಎ ಮೈತ್ರಿ ಕೂಟ ಸರ್ಕಾರ ಪತನವಾಗುವಂತಹ ಯಾವ ಒಪ್ಪಂದಗಳಿಗೂ ಅವಕಾಶವಿಲ್ಲ ಎಂದಿತು.
ಕೂಡಲೇ ಜಯಲಿತಾ ಸರ್ಕಾರಕ್ಕೆ ಕೊಟ್ಟಿದ್ದ ತಮ್ಮ ಬೆಂಬಲವನ್ನು ಹಿಂಪಡೆದರು. ಸರ್ಕಾರ ರಚಿಸಲು ಬೇಕಾದಷ್ಟು ಸೀಟುಗಳ ಸಂಖ್ಯೆಯನ್ನು ವಾಜಪೇಯಿ ಸರ್ಕಾರ ಹೊಂದಿಲ್ಲದ ಕಾರಣ ವಿಶ್ವಾಸ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ನಿರ್ಧರಿಸಲಾಯಿತು. ಆದರೆ ವಿಶ್ವಾಸ ಮತಗಳಲ್ಲಿಯೂ ಅವಶ್ಯ ಸಂಖ್ಯೆಯನ್ನು ತಲುಪಲು ಸಾಧ್ಯವಾಗದ ಕಾರಣ ವಾಜಪೇಯಿ ಸರ್ಕಾರ ಪತನವಾಯಿತು.
ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರಿಗೆ ಸರ್ಕಾರ ರಚಿಸಲು ಸಾಧ್ಯವಾದ ಪಕ್ಷದಲ್ಲಿ ಮತ್ತೊಂದು ಸರ್ಕಾರ ರಚನೆ ಮಾಡಲು ಸೂಚಿಸಿದರು. ಆದರೆ ಕಾಂಗ್ರೆಸ್ ಪಕ್ಷವು ಬಹುಮತಗಳ ಕೊರತೆಯಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದಿತು.
ಯಾವ ಪಕ್ಷಗಳಿಗೂ ಬಹುಮತವಾಗದ ಕಾರಣ ಹನ್ನೆರಡನೆ ಲೋಕಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆದೇಶ ಹೊರಡಿಸಿದರು. ಹಾಗೂ ಮುಂದಿನ ಚುನಾವಣೆಗಳು ನಡೆದು ಫಲಿತಾಂಶ ಪ್ರಕಟವಾಗುವ ವರೆವಿಗೂ ವಾಜಪೇಯಿ ಕಾರ್ಯ ನಿರ್ವಾಹಕ ಪ್ರಧಾನಿಯಾಗಿ ಮುಂದುವರೆಯಲು ಸೂಚಿಸಿದರು.
ಎಂದೂ ಮರೆಯಲಾಗದ ಕಾರ್ಗಿಲ್ ಯುದ್ಧ ನಡೆದ ಕೆಲವೇ ತಿಂಗಳುಗಳಲ್ಲಿ ನಡೆದ ಹದಿಮೂರನೆಯ ಲೋಕಸಭಾ ಚುನಾವಣೆಗಳು ನಡೆದು ಮತ್ತೆಯೂ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿತು. ಯುನೈಟೆಡ್ ಫ್ರಂಟ್ ಪಕ್ಷಗಳೂ ಕೂಡ ಮುನ್ನಡೆ ಸಾಧಿಸಿದವು. ಬಿಜೆಪಿ ನೇತೃತ್ವದ ಎನ್‌ಡಿಎ 270 ಸೀಟುಗಳನ್ನು ಪಡೆಯಿತು. ಕಾಂಗ್ರೆಸ್ 156 ಸೀಟುಗಳಿಗೆ ತೃಪ್ತಿ ಪಟ್ಟುಕೊಂಡು ಪ್ರತಿಪಕ್ಷದಲ್ಲಿ ಕೂರಬೇಕಾಯಿತು.
ಎನ್‌ಡಿಎ ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸಿ ಬಹುಮತ ಸಾಧಿಸಿತು. ಇದರ ಫಲವಾಗಿ ವಾಜಪೇಯಿ ನೇತೃತ್ವದಲ್ಲಿ ಸರ್ಕಾರ ರಚನೆಯಾಯಿತು. ಅಕ್ಟೋಬರ್ 1999 ರಲ್ಲಿ ವಾಜಪೇಯಿ ಮೂರನೆಯ ಬಾರಿಗೆ ಪ್ರಧಾನಿಯಾದರು. ಸಂಪೂರ್ಣ ಐದು ವರ್ಷ ಅವಧಿಯನ್ನು ಪೂರೈಸಿದ ಕಾಂಗ್ರೆಸ್ಸೇತರ ಮೊದಲ ಸರ್ಕಾರವೆಂಬ ಪಾತ್ರಕ್ಕೂ ವಾಜಪೇಯಿ ಸರ್ಕಾರ ಭಾಜನವಾಯಿತು.
Discussion about this post