ಶಿವಮೊಗ್ಗ: ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಈ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು.
ಬರಪರಿಸ್ಥಿತಿ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬರಪೀಡಿತ ತಾಲೂಕುಗಳಿಗೆ ತಲಾ ೫೦ಲಕ್ಷ ರೂ. ಸರ್ಕಾರ ಬಿಡುಗಡೆ ಮಾಡಲಿದೆ. ಈ ತಾಲೂಕುಗಳಲ್ಲಿ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರು ಒದಗಿಸಲು ಹಾಗೂ ಜಾನವಾರುಗಳಿಗೆ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ ಬೆಳೆ ಹಾನಿ ಸಂಭವಿಸಿದ ರೈತರಿಗೆ ಪರಿಹಾರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ. ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ಪ್ರಸ್ತುತ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇರುವುದಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಸುಮಾರು 216ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಬಹುದೆಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತಹ ತಾಲೂಕುಗಳಲ್ಲಿ ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಯಾವುದೇ ಕಡೆಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿಲ್ಲ. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸೂಚನೆ ನೀಡಲಾಗಿದೆ ಎಂದರು.
ಕುಡಿಯುವ ನೀರು ಸಮಸ್ಯೆ ಇರುವ ಹಳ್ಳಿಗಳಿಗೆ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದರು.
Discussion about this post