ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ‘ ಗಾಂಧೀ ಗ್ರಾಮ ಪುರಸ್ಕಾರ’ ಪ್ರಶಸ್ತಿ ಲಭಿಸಿದೆ.
ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಇತರ ಸಚಿವರುಗಳ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ.
ಪ್ರಶಸ್ತಿಯು ಗಾಂಧೀ ಪ್ರತಿಮೆಯುಳ್ಳ ಪಾರಿತೋಷಕ ಹಾಗೂ 5 ಲಕ್ಷ ರೂಗಳ ಚೆಕ್ ನ್ನು ಒಳಗೊಂಡಿದೆ ಎಂದು ಪಿಡಿಒ ಬಾಲಕೃಷ್ಣ ತಿಳಿಸಿದರು.
ಬಳಿಕ ಮಾತನಾಡಿದ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಸ್ವಚ್ಛತೆಯನ್ನು ಕಾಪಾಡಲಾಗಿದೆ. ಕುಡಿಯುವ ನೀರು, ನೈರ್ಮಲ್ಯ ಹಾಗೂ ಇನ್ನಿತರ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಲು ಸದಾ ಬದ್ಧರಾಗಿರುತ್ತೇವೆ. ಈ ಬಾರಿಯ ಗಾಂಧೀ ಗ್ರಾಮ ಪುರಸ್ಕಾರವು ನಮ್ಮ ಗ್ರಾಮ ಪಂಚಾಯಿತಿಗೆ ಲಭಿಸಿರುವುದು ಎಲ್ಲಾ ಸಿಬ್ಬಂಧಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಶ್ರಮವಾಗಿದೆ ಎಂದು ಹೇಳಿದರು.
ಬಳಿಕ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಮಾತನಾಡಿ, ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿರುವುದು ಸಂತಸದ ವಿಚಾರವಾಗಿದೆ. ತಾಲ್ಲೂಕಿನಲ್ಲಿಯೇ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವ ಕನಸನ್ನು ಹೊಂದಲಾಗಿದೆ. ಇದರ ನಿಟ್ಟಿನಲ್ಲಿ ಸಾಧ್ಯವಾದಷ್ಟು ನಾಗರೀಕರಿಗೆ ಯಾವುದೇ ತೊಂದರೆಯಾಗದಂತೆ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ಧರಾಗಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಅಧಿಕಾರಿಗಳ ಸಹಕಾರದಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ತಿಳಿಸಿದರು.
(ವರದಿ: ಬಿ.ಎಂ. ಅಜೇಯ್, ಗೌರಿಬಿದನೂರು)
Discussion about this post