ಕಲ್ಪ ಮೀಡಿಯಾ ಹೌಸ್ | ಹಾಸನ |
ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಹಿತಿ ನೀಡಿದ ಅವರು, ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಆಲೂರು ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಇದರಿಂದ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಹಾಗೂ ಆ ಭಾಗದ ನಿವಾಸಿಗರು ಆತಂಕದಲ್ಲಿ ಬದುಕುತ್ತಿದ್ದಾರೆ. ಸಮಸ್ಯೆಯ ಗಂಭೀರತೆ ಅರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.
ಅಧಿಕಾರಿಗಳು ಆನೆ ಹಾವಳಿ ಇರುವ ಪ್ರದೇಶಗಳಿಗೆ ಭೇಟಿ ನೀಡಬೇಕು. ಆನೆ ಮತ್ತು ಮಾನವ ಸಂಘರ್ಷದ ಕುರಿತು ವಾಸ್ತವಾಂಶ ಅರಿತು ಕಾರ್ಯಾಚರಣೆ ಮಾಡಬೇಕು. ಆನೆಗಳು ಹಾಗೂ ಮಾನವರ ಜೀವಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇವಿಷ್ಟು ಸೀಮಿತ ಅವಧಿಯಲ್ಲಿ ಆಗಬೇಕು. ಇದರ ನಂತರವೂ ಆನೆಗಳ ಹಾವಳಿ ಕಡಿಮೆ ಆಗದೇ ಇದ್ದರೆ ಮತ್ತೊಂದು ಸುತ್ತಿನ ಸಭೆ ನಡೆಸಿ ಮಾಹಿತಿ ಪಡೆಯುತ್ತೇನೆ ಎಂದರು.
ಆನೆ ಮಾನವ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ನೀಡಲೇಬೇಕಿದೆ. ಪದೇ ಪದೇ ನಡೆಯುತ್ತಿರುವ ಸಂಘರ್ಷದಿಂದ ಜೀವ ಹಾಗೂ ಅಪಾರ ಬೆಳೆ ಹಾನಿಯಾಗುತ್ತಿದೆ. ಅಗತ್ಯ ಬಿದ್ದರೆ ನಾನೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆ ಹರಿಸುವ ಕುರಿತು ನಿರ್ಣಯ ಕೈಗೊಳ್ಳುತ್ತೇನೆ ಎಂದು ಅವರು ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post