ಕಲ್ಪ ಮೀಡಿಯಾ ಹೌಸ್ | ಹಾಸನ |
ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ (Hasanamba Jatre) ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ಬರದ ಛಾಯೆಯ ನಡುವೆಯೂ ಶ್ರದ್ಧೆ, ಭಕ್ತಿ, ಸಡಗರ ಹಾಗೂ ಸಂಭ್ರಮದಿಂದ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆಯ ಸಂದರ್ಭದಲ್ಲಿ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Hasanamba Jatre : ಅ.29ರಂದು ಗರ್ಭಗುಡಿ ಬಾಗಿಲು ತೆರೆಯಲಿದೆ
ಈ ಬಾರಿ ಅಕ್ಟೋಬರ್ 29ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದೆ. ಆದರೆ ಅಂದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ.
ಬಳಿಕ ನವೆಂಬರ್ 1ರಿಂದ ನವೆಂಬರ್ 10ರವರೆಗೆ ಭಕ್ತರಿಗೆ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಈ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಅದಕ್ಕೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 11ರಂದು ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.
ಸೆ.26ರಂದು ಪೋಸ್ಟರ್, ವೆಬ್‌ಸೈಟ್ ಬಿಡುಗಡೆ
ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಜಾತ್ರೆಯ ಪೋಸ್ಟರ್ ಬಿಡುಗಡೆ ಮಾಡುವುದರ ಜೊತೆಗೆ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ ನೀಡಲಿದ್ದಾರೆ.
Also Read>> ಧರ್ಮಸ್ಥಳ : 28ನೇ ವರ್ಷದ ಭಜನಾ ಕಮ್ಮಟ: 400 ಭಜನಾ ತಂಡಗಳ 6,000ಕ್ಕೂ ಅಧಿಕ ಭಜನಾ ಪಟುಗಳ ಸಂಗಮ
ಜಾತ್ರೆಗೆ ಸಂಬಂಧಿಸಿದ ಮಾಹಿತಿ, ಕಾರ್ಯಕ್ರಮಗಳ ವಿವರ ಸೇರಿದಂತೆ ಭಕ್ತರಿಗೆ ಅಗತ್ಯವಿರುವ ಮಾಹಿತಿಯನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ವೆಬ್‌ಸೈಟ್ ರೂಪಿಸಲಾಗುತ್ತಿದೆ.
ಬರದ ಛಾಯೆಯ ನಡುವೆಯೂ ಭಕ್ತಿ-ಸಡಗರಕ್ಕೆ ಕೊರತೆಯಿಲ್ಲ
ಈ ಬಾರಿ ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಂತೆ ಅದ್ಧೂರಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡದೆ, ಜಿಲ್ಲೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಆದರೆ ಶ್ರದ್ಧೆ, ಭಕ್ತಿ ಹಾಗೂ ಸಡಗರದಿಂದ ಜಾತ್ರಾ ಮಹೋತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಾತ್ರೆಗೆ ಈಗಾಗಲೇ ವಿವಿಧ ಜವಾಬ್ದಾರಿಗಳಿಗಾಗಿ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ತಂಡವೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ.
ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ ಕಾರ್ಯಕ್ರಮ
ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಹಿತ್ಯ ವೈಭವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜಿಲ್ಲೆಯ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕಳೆದ ಬಾರಿಯ ಲೋಪಗಳು ಮರುಕಳಿಸದಂತೆ ಎಚ್ಚರಿಕೆ
ಜಾತ್ರಾ ಮಹೋತ್ಸವದ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಕಳೆದ ಬಾರಿ ಜಾತ್ರಾ ಸಂದರ್ಭದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಲೋಪಗಳನ್ನು ಗುರುತಿಸಿ, ಅವು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ತಂಡವೂ ಶಿಸ್ತುಬದ್ಧವಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ಗೊಂದಲ ಅಥವಾ ಅನಾನುಕೂಲ ಉಂಟಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲಾಖೆಗಳ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ಅವರು ಸೂಚಿಸಿದರು.
ಸ್ವಚ್ಛತೆಗೆ ವಿಶೇಷ ಆದ್ಯತೆ
ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ದೇವಾಲಯದ ಆವರಣ, ಭಕ್ತರು ಸಂಚರಿಸುವ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡದೆ, ನಿಯೋಜಿತ ತಂಡಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ನಿರ್ದೇಶನ ನೀಡಿದರು.
ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಎಲ್ಲಾ ತಂಡಗಳು ಸೆಪ್ಟೆಂಬರ್ 24ರಂದು ನಡೆಯಲಿರುವ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ, ತಮ್ಮ ಜವಾಬ್ದಾರಿಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮನ್ವಯ ಸಾಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಡಳಿತದ ವತಿಯಿಂದ ಭದ್ರತೆ, ಸ್ವಚ್ಛತೆ, ಸಂಚಾರ, ಕುಡಿಯುವ ನೀರು, ವೈದ್ಯಕೀಯ ಸೇರಿದಂತೆ ಭಕ್ತರಿಗೆ ಅಗತ್ಯವಿರುವ ಮೂಲಸೌಕರ್ಯಗಳ ವ್ಯವಸ್ಥೆಗಳನ್ನು ಸಮನ್ವಯದಿಂದ ಕೈಗೊಳ್ಳಲು ಸಿದ್ಧತೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








