ಕಲ್ಪ ಮೀಡಿಯಾ ಹೌಸ್ | ಹಾಸನ |
ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಮೇಲೆ ಟ್ರಕ್ ಹರಿದು ಒಂಬತ್ತು ಮಂದಿ ಮೃತಪಟ್ಟ ದಾರುಣ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಡೀ ಹಾಸನೇ ಸೂತಕ ಛಾಯೆಯಲ್ಲಿ ಮುಳುಗಿದೆ.
ಜಿಲ್ಲೆಯ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದ್ದು, 9 ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಹೇಗಾಯ್ತು ಘಟನೆ?
ಮೊಸಳೆಹೊಸಳ್ಳಿ NH 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್’ವೊಂದಕ್ಕೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಇವರು ವಿದ್ಯಾಭ್ಯಾಸ ಮಾಡುತ್ತಿದ್ದರು.
ಚಾಲಕ ಭುವನೇಶ್’ಗೂ ಗಂಭೀರ ಗಾಯಗಳಾಗಿದ್ದು, ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಂತಾಪ, ಪರಿಹಾರ ಘೋಷಣೆ
ಇನ್ನು, ಘಟನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಅವರು ಮೃತರ ಕಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಏನಿದೆ ಸಿಎಂ ಪೋಸ್ಟ್’ನಲ್ಲಿ?
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post