ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾಸನ: ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ನಿರ್ಮಿಸಿರುವ ಪೂಜಾ ಮಂದಿರಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ಆಯೋಜಿಸುವುದು ಕೋವಿಡ್-19 ನಿರ್ವಹಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನಗಳ ತೆರವು ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
2009ರ ನಂತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ದೇವಸ್ಥಾನಗಳು, ಮಸೀದಿಗಳು, ಚರ್ಚ್‌ಗಳು ಅಥವಾ ಯಾವುದೇ ರೀತಿಯ ಧಾರ್ಮಿಕತೆಗೆ ಸಂಬಂಧಿಸಿದ ಕಟ್ಟಡಗಳಿದ್ದರೆ, ಅದನ್ನು ಬೇರೆಡೆಗೆ ಸ್ಥಳಾಂತರಿಸಿ ಅಥವಾ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆ ಎಲ್ಲಾ ಸಿಬ್ಬಂದಿಗಳಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿಬೇಕು. ಕೋವಿಡ್ ಸೋಂಕು ಹೆಚ್ಚಿರುವ ರಾಜ್ಯಗಳಿಂದ ಶಿಕ್ಷಣ ಪಡೆಯಲು ಬರುತ್ತಿರುವಂತಹ ಪ್ಯಾರಾ ಮೆಡಿಕಲ್, ನರ್ಸಿಂಗ್, ಫಾರ್ಮಸಿ ಸೇರಿದಂತೆ ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ಎಂದು ಹೇಳಿದರು.
ಇದೆ ತಿಂಗಳ 28ರಂದು ನಡೆಯುವ ಎಫ್‌ಡಿಎ ಪರೀಕ್ಷೆಯನ್ನು ಯಾವುದೇ ಲೋಪದೋಷಗಳು ನಡೆಯದಂತೆ ಎಚ್ಚರ ವಹಿಸಿ ನಡೆಸಿ ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯಾವುದೇ ರಿತೀಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೊಠಡಿಯೊಳಗೆ ತರದಂತೆ ನಿಗಾವಹಿಸಿ ಎಂದು ಸೂಚಿಸಿದರು.
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪಿ. ಸತ್ಯವತಿ ಮಾತನಾಡಿ, ಇದೇ ತಿಂಗಳು 28ರಂದು ನಡೆಯಲಿರುವ ಪ್ರಥಮ ದರ್ಜೆ ಸಹಾಯಕ ಹುದ್ದಗೆ ಪರೀಕ್ಷೆಗೆ ಪೋಲಿಸ್ ಭದ್ರತೆ ತೆಗೆದುಕೊಂಡು ಎಚ್ಚರ ವಹಿಸಿ ಪರೀಕ್ಷೆ ನಡೆಸಿ ಎಂದರು.
ಪರೀಕ್ಷಾ ಕೊಠಡಿಯೊಳಗೆ ಯಾವುದೇ ರೀತಿಯ ಮೊಬೈಲ್. ಮೈಕ್ರೋಚಿಪ್, ಕ್ಯಾಲ್ಕುಲೇಟರ್ ಹಾಗೂ ಮತ್ತಿತರರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಎಚ್ಚರವಹಿಸಿ. ಕೋವಿಡ್ ಮಾರ್ಗಸೂಚಿಗಳಾದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆಯನ್ನು ಪಾಲಿಸುವಂತೆ ಅವರು ತಿಳಿಸಿದರು.
ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತಾರ್ ಮಾತನಾಡಿ, ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮನವೊಲಿಸಿ ಹಾಗೂ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಮತ್ತುಷ್ಟು ಹೆಚ್ಚಿಸಿ. ಕೋವಿಡ್ ೧೯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಿದರು.
ವಿಡಿಯೋ ಸಂವಾದದ ನಂತರ ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಇಲ್ಲಿಯವೆರೆಗೆ ಲಸಿಕೆ ಪಡೆದಿರುವರ ಮಾಹಿತಿ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ ಎಂದು ನಿರ್ದೇಶಿಸಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಸಲಹೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್, ವಿಶೇಷ ಭೂ ಸ್ವಾಧಿನಾಧಿಕಾರಿ ಮಂಜುನಾಥ್, ಆರ್.ಸಿ.ಎಚ್. ಅಧಿಕಾರಿ ಡಾ. ಕಾಂತರಾಜ್ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post