ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೆಲಂಗಾಣ: ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿಯೊಬ್ಬರ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಇದರಂತೆ ನಿನ್ನೆ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ ನಿರ್ಮಲ್ ಮೂಲದ 42 ವರ್ಷದ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.ನಿನ್ನೆ ಬೆಳಗ್ಗೆ 11.30ಕ್ಕೆ ಕುಂತಲದಲ್ಲಿರುವ ಪಿಎಚ್’ಸಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡಲಾಗಿತ್ತು. ಆದರೆ ನಿನ್ನೆ ರಾತ್ರಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ನಿರ್ಮಲ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ 5.30ರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆದರೆ, ಈ ಕುರಿತಂತೆ ತೆಲಂಗಾಣ ಆರೋಗ್ಯ ಇಲಾಖೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮಾರ್ಗಸೂಚಿಗಳ ಪ್ರಕಾರ, ವೈದ್ಯರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಜಿಲ್ಲಾ ಎಇಎಫ್‌ಐ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ರಾಜ್ಯ ಎಇಎಫ್‌ಐ ಸಮಿತಿಗೆ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದೆ. ಅಂತೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಗಳ ಅನ್ವಯ ಲಸಿಕೆಗೂ ಆರೋಗ್ಯ ಸಿಬ್ಬಂದಿ ಸಾವಿಗೂ ಸಂಬಂಧವಿಲ್ಲ ಎಂದೂ ಸ್ಪಷ್ಟನೆ ನೀಡಿದೆ.
ಆರೋಗ್ಯ ಸಿಬ್ಬಂದಿಯ ಸಾವಿಗೆ ಕೋವಿಡ್ ಲಸಿಕೆ ಕಾರಣವೋ ಅಲ್ಲವೋ ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆದರೆ, ಈ ವಿಚಾರ ತೆಲಂಗಾಣ ಸೇರಿದಂತೆ ರಾಷ್ಟ್ರದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಆರೋಗ್ಯ ಇಲಾಖೆ ಈ ಕುರಿತಂತೆ ಸ್ಪಷ್ಟ ಮಾಹಿತಿಯನ್ನು ಬಿಡುಗಡೆ ಮಾಡಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post