ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಒಬ್ಬ ಸಾಮಾನ್ಯ ವ್ಯಕ್ತಿ ಜನಪರ ಕಾಳಜಿಯಿಂದ ಅನೇಕ ರೀತಿಯ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಮಾತ್ರ ಆತ ಉತ್ತಮ ಜನನಾಯಕರಾಗಲು ಸಾಧ್ಯವಾಗುವುದು ಎಂದು ಸಂಸದ ಬಿ. ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.
ಎಂಐಎಸ್‌ಎಲ್ ಅಧ್ಯಕ್ಷರಾಗಿ ಆಯ್ಕೆಯಾದ ಸಾಗರ ಶಾಸಕ ಹರತಾಳು ಹಾಲಪ್ಪ ಅವರನ್ನು ಇಂದು ಪಟ್ಟಣದ ಮಾಳೇರಕೇರಿಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.
ಯಾವುದೇ ವ್ಯಕ್ತಿಯು ಜನಸಾಮಾನ್ಯರಲ್ಲಿ ಬೆರೆತು ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ, ಜನಪರ ಕಾಳಜಿಯಿಂದ ಅನೇಕ ರೀತಿಯ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನ ಸಾಮಾನ್ಯರಿಗೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತಾರೋ ಅವರು ಉತ್ತಮ ಜನನಾಯಕರಾಗಿ ಹೊರಹೊಮ್ಮುತ್ತಾರೆ ಎಂದರು.
ಮಾಜಿ ಸಚಿವ ಹರತಾಳು ಹಾಲಪ್ಪರವರು ಸೊರಬ, ಹೊಸನಗರ, ಸಾಗರ ತಾಲೂಕುಗಳಲ್ಲಿ ವಿವಿಧ ರೀತಿಯ ಜನ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದರು. ಸೊರಬ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಅವರು, ಅಲ್ಲಿ ಎಲ್ಲರ ಮಾರ್ಗದರ್ಶನದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಸೊರಬ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ ಅವರು ಸಚಿವರಾಗಿ ಸೇವೆ ಸಲ್ಲಿಸಿದವರು ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಇದೇ ಸಮಯದಲ್ಲಿ ಸಾಗರ ಹೊಸನಗರ ತಾಲೂಕಿನ ಶಾಸಕ ಹರತಾಳು ಹಾಲಪ್ಪ, ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಹಾಸನ ಪ್ರೀತಮ್ ಗೌಡ ಸೇರಿದಂತೆ ಅನೇಕರಿಗೆ ವಿವಿಧ ನಿಗಮಗಳ ಅಧ್ಯಕ್ಷರನ್ನಾಗಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ಈ ರೀತಿಯಾಗಿ ತಾವಾಗಲೀ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಾಗಲಿ ಬಿಜೆಪಿ ಶಾಸಕರೆಲ್ಲರೂ ಸೇರಿದಂತೆ ಒಟ್ಟಾರೆಯಾಗಿ ತಾಲೂಕಿನ, ಜಿಲ್ಲೆಯ, ರಾಜ್ಯದ ಅಭಿವೃದ್ಧಿಗೆ ಒತ್ತು ನೀಡಿ, ರೈತರಿಗೆ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದರು.
ಎಂಐಎಸ್’ಎಲ್ ನೂತನ ಅಧ್ಯಕ್ಷ ಹರತಾಳು ಹಾಲಪ್ಪ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ರಸ್ತೆಗಳು ಅಭಿವೃದ್ಧಿಯಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗಬೇಕಾಗಿದ್ದರೆ 8 ಗಂಟೆಗಳ ಕಾಲ ಪ್ರಯಾಣಿಸಬೇಕಿತ್ತು. ಆದರೀಗ ಕೇವಲ 4 ಗಂಟೆಗಳೊಳಗೆ ತಲುಪಬಹುದಾಗಿದೆ. ಇದಕ್ಕೆ ಕಾರಣ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಾಗಿದ್ದಾರೆ. ಸಂಘಟನೆಯಿಂದ ವಿವಿಧ ರೀತಿಯ ಜನ ಪರ ಹೋರಾಟಗಳಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂದು ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಾಗುತ್ತಿದೆ. ಇಂತಹ ಒಂದು ಸರ್ಕಾರದಲ್ಲಿ ಯಾವುದೇ ರೀತಿಯ ಕಳಂಕ ರಹಿತ ಆಡಳಿತ ನೀಡಲು ಪ್ರಯತ್ನಿಸುತ್ತೇನೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಮುಖಂಡರಾದ ವಸಂತ ಗೌಡ, ಸಿಕೇಂದ್ರಪ್ಪ, ಚಾರ್ಗಲಿ ಪರುಶುರಾಮ್, ಗುರುರಾಜ್ ಜಗತಾಪ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)
Get In Touch With Us info@kalpa.news Whatsapp: 9481252093
Discussion about this post