ಕಲ್ಪ ಮೀಡಿಯಾ ಹೌಸ್
ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಇದೀಗ ಗ್ರಾಮಸ್ಥರು ಹೋರಾಟದ ಎಚ್ಚರಿಕೆ ನೀಡುತ್ತಿದ್ದು, ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ ಗ್ರಾಮದಲ್ಲಿ ರಸ್ತೆಯಲ್ಲಿ ನಾಟಿ ಮಾಡುವುದರ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ.
ಒಂದಗದ್ದೆ ಹಾಗೂ ನೀರೇರಿ ಅವಳಿ ಗ್ರಾಮಗಳಾಗಿದ್ದು, ಇಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿ ದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಪ್ರಸ್ತುತ ಇಲ್ಲಿನ ಸಮಸ್ಯೆಯಿಂದಾಗಿ ಅದೆಷ್ಟೋ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಕಡಿವಾಣ ಹಾಕಿದ್ದಾರೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ರೋಗಿಗಳು, ವೃದ್ಧರು ಮತ್ತು ಅಶಕ್ತರು ದಾರಿ ಕಾಣದೆ ಕಂಗಾಲಾಗಿದ್ದಾರೆ. ಪರವೂರಿನೊಂದಿಗೆ ಸಂಪರ್ಕ ಬೆಳೆಸಲು ಹರಸಾಹಸ ಪಡುವಂತಾಗಿದೆ. ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಸೇರಿಸಲು 2-3 ಕಿಲೋಮೀಟರುಗಳ ದೂರ ಹೆಗಲ ಮೇಲೆ ಹೊತ್ತುಕೊಂಡು ಸಾಗಬೇಕಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯವಾಗಿ ಬೇಕಾದ ರಸ್ತೆ ಸಮರ್ಪಕವಾಗಿಲ್ಲ ಎಂದು ಆರೋಪಿಸಿ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಗ್ರಾಮಸ್ಥರು ವಿಭಿನ್ನ ಪ್ರತಿಭಟನೆಯನ್ನು ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಶಾಸಕರ ಕಛೇರಿ ಮುಂದೆ ಗ್ರಾಮಸ್ಥರು ಸಾಮೂಹಿಕವಾಗಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಮಾಹಿತಿ ಹಾಗೂ ಚಿತ್ರ: ದೇವರಾಜ್ ಆರಗ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post