ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭೆಯಲ್ಲಿ ಉಪಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಹಾಲಿ ಅಧಿವೇಶನದಿಂದ ಅಮಾನತುಗೊಳಿಸಲಾಗಿದ್ದು, ಕಲಾಪದಲ್ಲಿ ಹೈಡ್ರಾಮಾ ನಡೆದಿದೆ.
ಮಹಾಘಟಬಂಧನ್ ಸಭೆಗೆ ಪ್ರತಿಪಕ್ಷದ ಮುಖಂಡರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ ಕುರಿತಾಗಿ ಚರ್ಚೆ ನಡೆಯುತ್ತಿದ್ದ ವೇಳೆ ಹೈಡ್ರಾಮಾ ನಡೆಯಿತು. ಈ ವೇಳೆ ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಈ ಕಲಾಪದಿಂದ ಅಮಾನತು ಮಾಡಲಾಗಿದೆ.
ಯಾರೆಲ್ಲಾ ಅಮಾನತು?
ಡಾ. ಅಶ್ವತ್ಥ್ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಈ ಅಧಿವೇಶನ ಮುಗಿಯುವವರೆಗೂ ಸ್ಪೀಕರ್ ಯು.ಟಿ. ಖಾದರ್ ಅವರು ಅಮಾನತು ಮಾಡಿದ್ದಾರೆ.
ಕಲಾಪದ ವೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಸಂಬಂಧ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದಾರೆ. ಇದೀಗ ಈ ದೂರಿನ ಅಧಾರದ ಮೇಲೆ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿ, ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ರಮ ಕೈಗೊಂಡಿರುವ ಖಾದರ್ ಅವರು ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿದ್ದಾರೆ.
ಬಿಜೆಪಿ ಸದಸ್ಯರ ಧರಣಿ
10 ಸದಸ್ಯರನ್ನು ಈ ಅಧಿವೇಶನದಿಂದ ಅಮಾನತು ಮಾಡಿರುವ ಕ್ರಮವನ್ನು ವಿರೋಧಿಸಿ ಸ್ಪೀಕರ್ ಕಚೇರಿ ಮುಂಭಾಗದಲ್ಲಿ ಬಿಜೆಪಿ ಸದಸ್ಯರು ಧರಣಿ ನಡೆಸಿದ್ದಾರೆ.
ಸದಸ್ಯರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post