ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಕಮಲ್ ಪಂತ್ ಎಚ್ಚರಿಕೆ ನೀಡಿದರು.
ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಜಾಲತಾಣಗಳಲ್ಲಿ ವದಂತಿ ಹರಡುವುದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳಗಾವಿ ಹಾಗೂ ಬೀದರಿನಲ್ಲಿ ಹಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಲಾಗುತ್ತಿದ್ದು, ಸಾಮಾಜಿಕ ಅಶಾಂತಿಗೆ ಕಾರಣರಾಗುವವರ ವಿರುದ್ಧ ಜಾಮೀನು ರಹಿತ ಬಂಧನ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ಸೆಲ್ ತೆರೆಯಲಾಗಿದ್ದು, ತಪ್ಪು ಮೆಸೇಜ್ ಫಾರ್ವರ್ಡ್ ಮಾಡುವವರನ್ನು ಮಾತ್ರವಲ್ಲದೆ, ಅದನ್ನು ಕ್ರಿಯೇಟ್ ಮಾಡಿದವರನ್ನೂ ಸಹ ಪತ್ತೆ ಹಚ್ಚಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಗಾಂಜಾದಂತಹ ಮಾದಕ ಪದಾರ್ಥಗಳ ಉತ್ಪಾದನೆ, ಸರಬರಾಜು ಹಾಗೂ ಮಾರಾಟದ ಮೇಲೆ ನಿಗಾ ವಹಿಸಲಾಗಿದೆ. ಇದನ್ನು ತಡೆಯಲು ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿಶೇಷ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಕಾಲೇಜುಗಳ ಆಡಳಿತ ಮಂಡಳಿಗಳು ಸಹಕರಿಸುವ ಅಗತ್ಯವಿದೆ. ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಅಕ್ರಮ ವಲಸಿಗರ ಕುರಿತು ಪ್ರತಿ ತಿಂಗಳು ವರದಿಯನ್ನು ಸಲ್ಲಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಮತೀಯ ಗಲಭೆಗಳ ಪ್ರಮಾಣ ಕಡಿಮೆಯಾಗಿದೆ. ಮತೀಯ ದ್ರುವೀಕರಣವನ್ನು ತಡೆದು ಸೌಹಾರ್ದತೆಯನ್ನು ಮೂಡಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಅವರು ಮಾತನಾಡಿ, ಗಣೇಶೋತ್ಸವವನ್ನು ಶಾಂತಿಯಿಂದ ಆಚರಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ 22ಮೊಹಲ್ಲಾ ಸಮಿತಿ ಸಭೆಗಳನ್ನು ನಡೆಸಲಾಗಿದ್ದು, ಎಲ್ಲಾ ಮೊಹಲ್ಲಾಗಳಲ್ಲಿ ಸಭೆ ನಡೆಸಲಾಗುವುದು. ಗಣಪತಿ ಪ್ರತಿಷ್ಠಾಪನೆ ಮಾಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಕೆಲವು ಸಮಾಜಘಾತುಕರನ್ನು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಮುತ್ತುರಾಜ್ ಉಪಸ್ಥಿತರಿದ್ದರು.
Discussion about this post