ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಇಂದು ಕಲಬುರಗಿಯ ನೂತನ ವಿದ್ಯಾಲಯದ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ತೊಗರಿ ಮಂಡಳಿಯ ‘ಭೀಮಾ ಪಲ್ಸ್’ ಬ್ರ್ಯಾಂಡ್ನಡಿ ತೊಗರಿ ಮಾರಾಟಕ್ಕೆ ಚಾಲನೆ ನೀಡಿದರು. ಇದಲ್ಲದೆ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಕಲ್ಯಾಣ ಕರ್ನಾಟಕದಲ್ಲಿ 2100 ಶಾಲಾ ಕೊಠಡಿ, 2500 ಅಂಗನವಾಡಿ ಕೇಂದ್ರ ಪ್ರಾರಂಭ:
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷದಲ್ಲಿ 2100 ಶಾಲಾ ಕೊಠಡಿಗಳ ನಿರ್ಮಾಣ ಹಾಗೂ 2500 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.
ಅವರು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಲಬುರಗಿಯ ಪೊಲೀಸ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಕಂಡ ಕನಸನ್ನು ನಾವೇ ನನಸು ಮಾಡುವ ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲು ಆದೇಶಿಸಲಾಗಿದೆ. ಆರೋಗ್ಯ ಸೇವೆ ಉತ್ತಮಪಡಿಸಲು 68 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುತ್ತಿದ್ದು, 14 ಪಿಎಚ್ಸಿತಗಳನ್ನು ಸಿಎಚ್ಸಿ6ಗಳಾಗಿ ಉನ್ನತೀಕರಿಸಲಾಗುತ್ತಿದೆ ಎಂದು ವಿವರಿಸಿದರು.
ಅತಿ ಹೆಚ್ಚು ಅನುದಾನ:
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರೂಪಿಸಬೇಕಾದ ಕಾರ್ಯಕ್ರಮಗಳು ಹಾಗೂ ದೀರ್ಘಕಾಲದ ಯೋಜನೆಗಳ ಕುರಿತು ಚಿಂತನೆ ಮಾಡಿದ್ದೇನೆ. ಸಂವಿಧಾನದ 371ನೇ ವಿಧಿಗೆ ತಿದ್ದುಪಡಿಯಾದ ನಂತರ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಒದಗಿಸಿದ ಅನುದಾನವನ್ನು ಗಮನಿಸಿದರೆ, ನಮ್ಮ ಸರ್ಕಾರ ಇತಿಹಾಸದಲ್ಲಿ ಮೊದಲ ಬಾರಿ ಸಂಪೂರ್ಣ ಅನುದಾನ ಬಿಡುಗಡೆ ಮಾಡಿದೆ. ಅಂದು ಭರವಸೆ ನೀಡಿದಂತೆ ಬಜೆಟ್ನಲ್ಲಿ 3000 ಕೋಟಿ ರೂ. ಮಿಸಲಿಟ್ಟು ನಾಲ್ಕೇ ತಿಂಗಳಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಇದೊಂದು ಕ್ರಿಯಾಶೀಲ ಸರ್ಕಾರ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಲ್ಯಾಣ ಕರ್ನಾಟಕ ಆಗಿದೆ. ಕಲ್ಯಾಣ ರಾಜ್ಯ ಆಗಬೇಕು. ಆ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೆವೆ ಎಂದು ಅವರು ನುಡಿದರು.
ಸ್ತ್ರೀ ಸಾಮರ್ಥ್ಯ, ಯುವಶಕ್ತಿಗೆ ಮನ್ನಣೆ:
ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಹೆಚ್ಚಿಸಲು ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತರಲಾಗಿದೆ. ಅಂತೆಯೇ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರತಿ ಗ್ರಾಮದಲ್ಲಿ ಮಹಿಳೆಯರ ಮತ್ತು ಯುವಕರ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ, ಕಿರುಉದ್ದಿಮೆ ಪ್ರಾರಂಭಿಸಲು ಸಾಲಸೌಲಭ್ಯ, ಬೀಜಧನ ಒದಗಿಸಿ, ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಯೋಜನೆ ಇದಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಇದರಿಂದ ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.
ಕುಶಲ ಕರ್ಮಿಗಳ ಸಮುದಾಯದ ಯುವಕರಿಗೆ ಪ್ರತಿಯೊಬ್ಬರಿಗೆ 50 ಸಾವಿರ ರೂ. ಸಾಲ/ಸಬ್ಸಿಡಿ ನೀಡುವ ಯೋಜನೆ ಜಾರಿಗೊಳಿಸಲಾಗುತ್ತಿದೆ.
Also read: ಮತ್ತೆ ಸಚಿವ ಸ್ಥಾನ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ: ಮಾಜಿ ಸಚಿವ ಈಶ್ವರಪ್ಪ
ಗುಳೆ ಹೋಗುವುದು ಅಂದರೆ ಮನಸ್ಸು ಕಲಕುತ್ತದೆ ಎಂದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಭಾಗದ ಜನರು ಗುಳೆ ಹೋಗುವುದನ್ನು ತಡೆಯಲು ಸಮಗ್ರ ಯೋಜನೆ ರೂಪಿಸುತ್ತೇವೆ ಎಂದು ತಿಳಿಸಿದರು. ಕೃಷಿ ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.
ಗ್ರೀನ್ ಕಾರಿಡಾರ್:
ಬೀದರ್, ಬಳ್ಳಾರಿ,ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬಸವರಾಜ್ ಪಾಟೀಲ್ ಸೇಡಂ ಅವರ ನೇತೃತ್ವದಲ್ಲಿ ಸಾಂಸ್ಕೃತಿಕ ಸಂಘ ಮಾಡಿದ್ದೇವೆ. ಸುಮಾರು 2 ಲಕ್ಷ ಎಕರೆಗಿಂತ ಹೆಚ್ಚಿರುವ ಬಂಜರು ಭೂಮಿಯನ್ನು ಕೃಷಿ ಯೋಗ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಈ ಭಾಗದ ಹಸಿರು ಪ್ರದೇಶ ಹೆಚ್ಚಿಸಲು ಕೊಪ್ಪಳದಿಂದ ಕಲಬುರ್ಗಿ, ಬಳ್ಳಾರಿಯಿಂದ ರಾಯಚೂರುವರೆಗೆ ಗ್ರೀನ್ ಕಾರಿಡಾರ್ ಮಾಡಲು ತೀರ್ಮಾನಿಸಿದ್ದೇವೆ. ಇದರೊಂದಿಗೆ ಕೃಷಿ ಅರಣ್ಯಕ್ಕೆ ಉತ್ತೇಜನ ನೀಡಲು ಅರಣ್ಯ ಇಲಾಖೆಗೆ 10. ಕೋಟಿ ನೀಡಲಾಗಿದೆ ಎಂದು ತಿಳಿಸಿದರು.
ಈ ಪ್ರದೇಶ ಅಷ್ಟು ಸುಲಭವಾಗಿ ದೊರೆತಿಲ್ಲ. ಈ ಭಾಗದ ವಿಮೋಚನೆಗೆ ನಾವು ಒಂದು ವರ್ಷ ಕಾಯಬೇಕಾಯಿತು.ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿಲುವು ಮತ್ತು ನೇತೃತ್ವದಿಂದ ನಿರ್ಧಾರದಿಂದ ಈ ಭಾಗ ಸಮಗ್ರ ಕರ್ನಾಟಕ ಸೇರುವಂತಾಯಿತು ಎಂದು ಕಲ್ಯಾಣ ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಗಣ್ಯರು ಹಾಗೂ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸಲು ಹೋರಾಡಿದ ಮಹನೀಯರನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
ಈ ಭಾಗದಲ್ಲಿ ಮಾನವ ಸಂಪನ್ಮೂಲ, ನೈಸರ್ಗಿಕ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಕೊರತೆ ಇರುವುದು ಅವಕಾಶದ್ದು. ಅದನ್ನು ಒದಗಿಸುವ ಸಂಕಲ್ಪ ನಮ್ಮ ಸರ್ಕಾರ ಮಾಡಿದೆ. ಗಾಂಧೀಜಿ, ಅಟಲ್ ಬಿಹಾರಿ ವಾಜಪೇಯಿ ಅವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಸ್ವರಾಜ್ಯ ಬಂದಾಗಿದೆ. ಸುರಾಜ್ಯ ನಿರ್ಮಾಣ ಮಾಡಬೇಕಾಗಿದೆ ಎಂದ ಮುಖ್ಯಮಂತ್ರಿಗಳು ವರ್ಷಾಂತ್ಯದಲ್ಲಿ ಪ್ರಗತಿಯ ವರದಿಯೊಂದಿಗೆ ಜನರ ಮುಂದೆ ಬರುವುದಾಗಿ ತಿಳಿಸಿದರು.
ವರ್ಷಪೂರ್ತಿ ಆಚರಣೆ:
ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ವರ್ಷವನ್ನು ವರ್ಷಪೂರ್ತಿ ಆಚರಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಜನಜಾಗೃತಿಗಾಗಿ ಎಲ್ಲ ಜಿಲ್ಲೆಗಳಲ್ಲಿ ರಥಯಾತ್ರೆ ಕೈಗೊಳ್ಳಲಾಗುವುದು ಎಂದರು.
ಇಂದು ಪ್ರಧಾನಿ ಮೋದಿ ಹುಟ್ಟು ಹಬ್ಬ, ಅವರಿಗೆ ಸಮಸ್ತ ಕರ್ನಾಟಕ ವಿಶೇಷವಾಗಿ ಕಲ್ಯಾಣ ಕರ್ನಾಟಕ ಜನತೆಯ ಪರವಾಗಿ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಅವರು ಈ ಭಾಗದ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ದವಾಗಿದೆ ಅಂತ ಭರವಸೆ ನೀಡಿ ಎಂದು ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ಪ್ರೆ ಸ್ ಹೆದ್ದಾರಿ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ:
ಬೀದರ್ ದಿಂದ ಬಳ್ಳಾರಿವರೆಗೆ 4 ವೇ ಎಕ್ಸ್ಪ್ರೆ ಸ್ ಹೈವೇ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಸಂಪರ್ಕ ಉತ್ತಮ ಗೊಳಿಸಲು ಈ ಹೆದ್ದಾರಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಭಾಗದಲ್ಲಿ ರಾಯಚೂರು, ಬಳ್ಳಾರಿ ವಿಮಾನ ನಿಲ್ದಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರದ ನೆರವಿನೊಂದಿಗೆ ಯಾದಗಿರಿ, ರಾಯಚೂರು, ಗುಲಬರ್ಗ ರಿಂಗ್ ರೋಡ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೈಗಾರಿಕಾ ಅಭಿವೃದ್ಧಿ:
ಈ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರ ಕಲಬುರ್ಗಿಯಲ್ಲಿ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಿದೆ. ರಾಜ್ಯ ಸರ್ಕಾರ ರಾಯಚೂರು ಹಾಗೂ ಬಿಜಾಪುರ ರಲ್ಲಿ ಟೆಕ್ಸ್ಟೈಲ್ ಪಾರ್ಕ್ ಮಾಡಲು ನಿರ್ಧರಿಸಿದೆ. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಸೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರ್ ನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು. ಹೀಗೆ ಪ್ರತಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು
ಪಕ್ಷಭೇದ ಮರೆತು ಶ್ರಮಿಸಿ: ಸಿಎಂ ಕಿವಿಮಾತು
ಈ ಭಾಗದ ಅಭಿವೃದ್ದಿಯಾಗಬೇಕೆಂದರೆ ರಾಜಕಾರಣಿಗಳು ಪಕ್ಷಬೇದ ಮರೆತು ಕೆಲಸ ಮಾಡಬೇಕು.ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರಾಜಕಾರಣ ಮಾಡಿದರೆ ಈ ಭಾಗಕ್ಕೆ ದೊಡ್ಡ ದ್ರೋಹ ಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಲಬುರಗಿ ಅಭಿವೃದ್ಧಿ:
ಕಲಬುರ್ಗಿ ಅಭಿವೃದ್ಧಿಗೆ 100 ಕೋಟಿ ನೀಡಿದ್ದೇನೆ. ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ, ಇಲ್ಲಿ ಎಲ್ಲ ರೀತಿಯ ವೈ ಫೈ ಕನೆಕ್ಟ್, ಕೇಬಲ್ ಕನೆಕ್ಟ್ ಮತ್ತಿತರ ಅತ್ಯಾಧುನಿಕ ಸೌಲಭ್ಯ ಒದಗಿಸುವ ಮೂಲಕ ಅಂತಾರಾಷ್ಟ್ರೀಯ ನಗರ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಸಮಸ್ತ ಕರ್ನಾಟಕ ಅಭಿವೃದ್ದಿಯಾಗುತ್ತಿರುವ ಈ ಸಮಯದಲ್ಲಿ ಐತಿಹಾಸಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕವೂ ಅಷ್ಟೇ ವೇಗವಾಗಿ ಬೆಳೆಯಬೇಕು. ಕಲ್ಯಾಣ ಕರ್ನಾಟಕದ ಮೂಲಕ ನವ ಕರ್ನಾಟಕ ಹಾಗೂ ನವ ಭಾರತದ ಅಭಿವೃದ್ದಿಯಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post