ಕಲ್ಪ ಮೀಡಿಯಾ ಹೌಸ್
ಕಲಬುರಗಿ: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನಗರದ ಐವಾನ್-ಈ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ವರಿಷ್ಠರ ಆದೇಶವನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಇಲ್ಲಿ ಹುದ್ದೆಗಾಗಿ ಬೇರೆ ಪಕ್ಷದಂತೆ ಲಾಬಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಯಾವುದೇ ಹುದ್ದೆಗಾಗಿ ಲಾಬಿ ಮಾಡುತ್ತಿಲ್ಲ, ರಾಷ್ಟ್ರಿಯ ನಾಯಕರು ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ. ನನಗೆ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಸ್ಥಾನಮಾನಕ್ಕಾಗಿ ನಾನು ಯಾವತ್ತೂ ಲಾಬಿ ಮಾಡಿಲ್ಲಘಿ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿ ಪಕ್ಷದ 120 ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲೂ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಅಧಿಕೃತವಾಗಿ ಈವರೆಗೆ ಯಾವುದೇ ಸೂಚನೆ ಬಂದಿಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ಜೊತೆ ನಾವಿರುತ್ತೇವೆ ಬೆಂಬಲ ಸೂಚಿಸಿದರು. ಯಾರನ್ನು ಈ ಸ್ಥಾನಕ್ಕಾಗಿ ಕೂರಿಸಬೇಕೆಂದು ನಮ್ಮ ವರಿಷ್ಠರು ತೀರ್ಮಾನಿಸುತ್ತಾರೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಬೇಕೆಂದು ಹೇಳಿದರು.
ವಿಶೇಷ ಅರ್ಥ ಬೇಡ:
ನಾನು ಚಿಕ್ಕನಿಂದಲೂ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುವುದನ್ನು ರೂಢಿಸಿಕೊಂಡು ಬಂದಿದ್ದೇನೆ. ಈಗಲೂ ಅಷ್ಟೇ. ಸಾಮಾನ್ಯವಾಗಿ ತಿಂಗಳು – ಎರಡು ತಿಂಗಳಿಗೊಮ್ಮೆ ದೇವಸ್ಥಾನಕ್ಕೆ ಹೋಗಿಬರುತ್ತೇನೆ. ಅದರಂತೆಯೇ ನಾನು ವಾರಣಾಸಿಗೆ ಹೋಗಿದ್ದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
ನಾನು ವಾರಣಾಸಿಗೆ ಹೋಗಿದ್ದಕ್ಕೆ ಏನೇನೋ ಅರ್ಥ ಕಲ್ಪಿಸಲಾಗಿತ್ತು. ಪ್ರತಿ ತಿಂಗಳು ನಾನು ಒಂದೊಂದು ದೇವಸ್ಥಾನಕ್ಕೆ ಹೋಗಿಬರುತ್ತೇನೆ. ಇದಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಮತದಾರರು ನಮಗೆ ಮತ
ಹಾಕಿ ಆರಿಸಿ ಕಳಿಸಿದ್ದಾರೆ. ಅವರ ನಿರೀಕ್ಷೆಯಂತೆ ಕೆಲಸ ಮಾಡುವುದೊಂದೇ ನನ್ನ ಮೂಲ ಉದ್ದೇಶ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post