ಕಲ್ಪ ಮೀಡಿಯಾ ಹೌಸ್
ಕಲಬುರಗಿ: ಸಾಮಾನ್ಯರು ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಹೇಳಿದ್ದಾರೆ.
ನಗರದಲ್ಲಿ ಸಚಿವರಾದ ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ. ಹೀಗಾಗಿಯೇ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಹತ್ತು ಲಕ್ಷ ರೂ. ಒಳಗಿನ ಮನೆ ನಿರ್ಮಾಣಕ್ಕೆ 100 ರೂ.ಗೆ ಒಂದು ಟನ್ ಮರಳು ವಿತರಣೆ ಮಾಡಲಿದ್ದೇವೆ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಇದರಿಂದ ಅನುಕೂಲವಾಗಲಿದೆ. ಹಳ್ಳಕೊಳ್ಳ, ಚೆಕ್‍ಡ್ಯಾಂ, ಝರಿಗಳಲ್ಲಿ ಉಚಿತವಾಗಿ ಮರಳು ತೆಗೆದು ಎತ್ತಿನ ಗಾಡಿ ಮೂಲಕ ಸಾಗಾಣಿಕಗೆ ಅವಕಾಶ ನೀಡಲಾಗುವುದು ಎಂದರು.

ಇದೇ 17ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನರು ನಂಬುವುದಿಲ್ಲ ಎಂದು ಟೀಕಿಸಿದರು.
ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ:
ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ಇಲಾಖೆ ಸಿಬ್ಬಂದಿಗಳು ಕಳೆದ 5 ದಿನಗಳಿಂದ ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರವಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನಿನ ಮಾನ್ಯತೆ ಇಲ್ಲ. ಆರನೇ ವೇತನ ಆಯೋಗವನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಆಗುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಮತ್ತು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಉಪಚುನಾವಣೆ ನಂತರ ವೇತನ ಹೆಚ್ಚಳ ಮಾಡುವ ಸ್ಪಷ್ಟ ಭರವಸೆ ನೀಡಲಾಗಿದೆ. ನೌಕರರು ಕೂಡಲೇ ಪ್ರತಿಭಟನೆ ಕೈ ಬಿಟ್ಟು ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕು. ಪ್ರತಿಭಟನೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಕಾರ್ಮಿಕರು ಹೋರಾಟಕ್ಕೆ ಇಳಿಯುವಾಗ ರಾಜಕೀಯ ಪ್ರೇರಿತ ವ್ಯಕ್ತಿ ಇಟ್ಟುಕೊಂಡು ಹೋಗುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post