ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ನನಗೆ ಎಷ್ಟೇ ಜೀವಬೆದರಿಕೆಗಳು ಬರಲಿ, ಎದುರಿಸುತ್ತೇನೆ. ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ #Priyanka Kharge ಹೇಳಿದರು.
ಕಲಬುರಗಿ ನಗರದ ರಿಂಗ್ ರಸ್ತೆಯ ಮೊಘಲ್ ಗಾರ್ಡನ್ ನಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉಪಯೋಗದ ಕುರಿತು ಮಾತನಾಡಿದ ಖರ್ಗೆ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ. ಆದರೆ, ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಎಲ್ಲಾ ಯೋಜನೆಗಳನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಅವರನ್ನು ನೀವು ಅಧಿಕಾರಕ್ಕೆ ತರುತ್ತೀರಾ ? ಎಂದು ಪ್ರಶ್ನಿಸಿದರು.

ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ ಲೀಡ್ ಕೊಟ್ಟಿದ್ದೀರಿ.ಈ ಸಲವೂ ಕೂಡಾ ಕನಿಷ್ಠ ಶೇ.90ರಷ್ಟು ಮತದಾನ ಮಾಡುವ ಮೂಲಕ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ್ ಸಿಂಗ್ ಮಾತನಾಡಿ ಈ ಸಲದ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿದೆ. ಇಲ್ಲಿ ರಾಧಾಕೃಷ್ಣ ಅವರು ಅಭ್ಯರ್ಥಿಯಾಗಿದ್ದರೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ನಡುವಿನ ಚುನಾವಣೆ ಯಾಗಿದೆ ಎಂದರು.

Also read: ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ
ಖಾಜಾ ಬಂದೇನವಾಜ್ ದರ್ಗಾದ ಸಾಬೇಬ್, ಡಾ ಮುಸ್ತಫಾ ಬಾಬಾ ಮಾತನಾಡಿ, ತಳಮಟ್ಟದಲ್ಲಿ ರಾಧಾಕೃಷ್ಣ ಅವರು ಕೆಲಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಶಾಸಕಿ ಕನೀಜ್ ಫಾತೀಮಾ ಅವರ ಮಾರ್ಗದರ್ಶನದಂತೆ ಎಲ್ಲರೂ ಕೆಲಸ ಮಾಡಿ ರಾಧಾಕೃಷ್ಣ ಅವರನ್ನು ಗೆಲ್ಲಿಸಬೇಕು ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಉತ್ತರ ಶಾಸಕಿ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಮಜಹರ್ ಖಾನ್, ಶರಣು ಮೋದಿ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post