ಕಲ್ಪ ಮೀಡಿಯಾ ಹೌಸ್ | ಸೊರಬ (ಶಿವಮೊಗ್ಗ) | ವರದಿ : ಮಧು ರಾಮ್ ಸೊರಬ |
ಕನ್ನಡ ಭಾಷೆ (Kannada Language)ಕೇವಲ ಸಂವಹನದ ಮಾಧ್ಯಮವಲ್ಲ. ಅದು ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಹಾಗೂ ಬದುಕಿನ ಅವಿಭಾಜ್ಯ ಅಂಗವಾಗಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಭಾಷೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಮಾಜಿ ಅಧ್ಯಕ್ಷ ಡಾ. ಎಂ.ಕೆ. ಭಟ್ ಹೇಳಿದರು.
ಪಟ್ಟಣದ ಕನ್ನಡ ಭವನದಲ್ಲಿ ಭಾನುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೊರಬ ಘಟಕದ ವತಿಯಿಂದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಆಶಯ ನುಡಿಗಳನ್ನಾಡಿದರು.
ಮಕ್ಕಳಲ್ಲಿ ಬಾಲ್ಯದಿಂದಲೇ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮತ್ತು ಪ್ರೀತಿಯನ್ನು ಬೆಳೆಸುವುದು ಅತ್ಯಂತ ಮುಖ್ಯವಾಗಿದೆ. ಮನೆ, ಶಾಲೆ ಹಾಗೂ ಸಾಮಾಜಿಕ ವಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವುದರ ಜತೆಗೆ ಅವುಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ. ಭಾಷೆಯ ಬೆಳವಣಿಗೆ ಕೇವಲ ಸಂಘ-ಸಂಸ್ಥೆಗಳಿಂದ ಸಾಧ್ಯವಿಲ್ಲ. ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ನಿರಂತರ ಪ್ರಯತ್ನವೂ ಅಗತ್ಯವಾಗಿದೆ ಎಂದು ತಿಳಿಸಿದರು.
Kannada Language: ದೈನಂದಿನ ಬದುಕಿನಲ್ಲಿ ಕನ್ನಡ ಬಳಕೆಯಾಗಲಿ
ದಂತ ವೈದ್ಯ ಡಾ. ಜ್ಞಾನೇಶ್ ಹೆಚ್.ಈ. ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಕನ್ನಡ ಭಾಷೆಯ ಮೇಲಿನ ಗೌರವವನ್ನು ಕೇವಲ ಮಾತುಗಳಲ್ಲಿ ವ್ಯಕ್ತಪಡಿಸದೆ, ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ತೋರಿಸಬೇಕು. ಕನ್ನಡಿಗರು ತಮ್ಮ ಭಾಷೆಯ ಬಗ್ಗೆ ಹೆಮ್ಮೆ ಹೊಂದುವುದರ ಜತೆಗೆ ಇತರ ಭಾಷೆಗಳನ್ನೂ ಗೌರವಿಸುವ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು. ಭಾಷೆಯ ಬಳಕೆ ಹೆಚ್ಚಾದಾಗ ಮಾತ್ರ ಅದರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.
Also Read>> ಏಕೀಕರಣದ 70 ವರ್ಷ ಅವಲೋಕನಕ್ಕೆ ಸಕಾಲ
ಕನ್ನಡ ಚಟುವಟಿಕೆಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅಗತ್ಯ
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಷಣ್ಮುಖಾಚಾರ್ ಎನ್. ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡದ ಪರವಾಗಿ ನಡೆಯುವ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮಗಳ ಮೂಲಕ ಕನ್ನಡ ಭಾಷೆಯ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಲಿದೆ ಎಂದು ಹೇಳಿದರು.
ಕಲಾವಿದ, ಸಾಹಿತ್ಯಾಸಕ್ತರಿಗೆ ಸನ್ಮಾನ
ಕಾರ್ಯಕ್ರಮದ ಅಂಗವಾಗಿ ಹಸೆ ಚಿತ್ರಕಲಾವಿದ ವಿಶ್ವನಾಥ ಹೆಜ್ಜೆ ಹಾಗೂ ಕನ್ನಡ ಸಾಹಿತ್ಯಾಸಕ್ತ ಶ್ರೀನಿವಾಸ ಭಟ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಎಸ್.ಟಿ. ಮುರಳೀಧರ್, ಗೃಹರಕ್ಷಕ ದಳದ ಘಟಕಾಧಿಕಾರಿ ಎಚ್.ಎಂ. ಪ್ರಶಾಂತ್, ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕೆ. ಮಹಾಬಲೇಶ್ವರ ಹಾಗೂ ವಕೀಲ ಯೋಗೇಶ್ ಎಂ.ಕೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ರಮೇಶ್ ಎನ್. ಮಂಚಿ, ಮಂಜಪ್ಪ ಹುಲ್ತಿಕೊಪ್ಪ, ಮೋಹನ್ ಸುರಭಿ, ರೇವಣಪ್ಪ ಬಿದರಗೇರಿ, ಲಿಂಗರಾಜ ಕೆ. ಗೌಡರ್, ಮಾಲತೇಶ ಕೆ.ಎಚ್., ಸವಿತಾ ಎಂ.ಕೆ. ಭಟ್, ರೂಪಾ ಮಾಧುಕೇಶ್ವರ, ವೀಣಾ ಶ್ರೀಧರ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾನುಕೇರಿಯ ಶಿಕ್ಷಕ ವೃಂದ, ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಸದಸ್ಯರು, ಗೃಹರಕ್ಷಕ ದಳ ಹಾಗೂ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮತ್ತು ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










