ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದ್ದು, ಕೈ ಮುಖಂಡರು ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪ ಸಂಖ್ಯಾತರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗುವುದಿಲ್ಲ. ಆದರೂ ಸಮಾಜದ ಒಂದು ವರ್ಗದ ಜನ ಪ್ರತಿಭಟನೆ ಹೆಸರಿನಲ್ಲಿ ಕಿಚ್ಚು ಹಚ್ಚುತ್ತಿದ್ದು ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡರ ಕಿತಾಪತಿಯಿಂದ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಯು.ಟಿ. ಖಾದರ್ ಅಂತಹ ನಾಯಕರ ಕೈವಾಡದಿಂದ ಗಲಾಟೆಯಾಗುತ್ತಿದೆ. ಮುಸಲ್ಮಾನರ ರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಈ ಸಂದರ್ಭದಲ್ಲಿ ಎಲ್ಲರೂ ಶಾಂತಿ ಕಾಪಾಡಬೇಕು. ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಬೆಂಬಲ ಮುಂದುವರಿಸಿದರೆ ಅದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇನ್ನು ರಾಜ್ಯದ ಹಲವೆಡೆ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ಅವರು ಮುಖ್ಯಮಂತ್ರಿಗಳನ್ನು ಇಂದು ಭೇಟಿಯಾಗಿ ಕಾನೂನು ಸುವ್ಯವಸ್ಥೆ ಕುರಿತಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯದಾದ್ಯಂತ ಪೊಲೀಸ್ ಇಲಾಖೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ನಿಷೇಧಾಜ್ಞೆ ಜಾರಿಯಾಗಿರುವ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲು ಸಿಎಂ ಸೂಚಿಸಿದ್ದು, ತೀವ್ರ ಮಟ್ಟದ ಗಲಾಟೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಆದೇಶಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post