ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಅಂಗಡಿಗಳಲ್ಲಿ ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಎಂದಿನಂತೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇಂದಿನಿಂದ ಮಾ.31ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಗಿದೆ. ಜನರು ಒಟ್ಟಾಗಿ ಸೇರುವಂತಹ ಮಾರುಕಟ್ಟೆ ಪ್ರದೇಶಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇದೇ ರೀತಿ ಅಗತ್ಯ ವಸ್ತುಗಳು, ದಿನಸಿ ಸಾಮಾಗ್ರಿ ಇತ್ಯಾದಿ ಅಂಗಡಿಗಳನ್ನು ಹೊರತುಪಡಿಸಿ ಬೇರೆಲ್ಲಾ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಲಾಗಿದೆ ಎಂದು ಹೇಳಿದರು.
ತಳ್ಳು ಗಾಡಿಗಳಿಗೆ ಅವಕಾಶ
ರಸ್ತೆ ಬದಿ ವ್ಯಾಪಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು. ಆದರೆ ತಳ್ಳುಗಾಡಿಗಳಲ್ಲಿ ಮನೆ ಬಾಗಿಲಿಗೆ ತರಕಾರಿ, ಹೂವು, ಹಣ್ಣು ಇತ್ಯಾದಿ ವಸ್ತುಗಳ ಮಾರಾಟವನ್ನು ಪ್ರೋತ್ಸಾಹಿಸಲಾಗುವುದು. ಜನರು ಗಾಬರಿಗೊಳ್ಳದೆ, ಅನಗತ್ಯವಾಗಿ ಮನೆಯಿಂದ ಹೊರಗೆ ಬಾರದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಪ್ರಯಾಣಿಕರ ವಾಹನ ಸಂಪೂರ್ಣ ನಿರ್ಬಂಧ
ಜಿಲ್ಲೆಯಲ್ಲಿ ಪ್ರಯಾಣಿಕರ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತೊಳಿಸಲಾಗಿದೆ. ಗೂಡ್ಸ್ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ತಮ್ಮ ವಾಹನಗಳನ್ನು ಬಳಸಿಕೊಳ್ಳಬಹುದಾಗಿದೆ ಎಂದರು.
ಮೆಗ್ಗಾನ್ ಆಸ್ಪತ್ರೆ ಸಜ್ಜು: ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕರೋನಾ ವೈರಸ್ ಚಿಕಿತ್ಸೆಗಾಗಿ ಮೀಸಲಾಗಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತುಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್‍ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್‍ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಹೊರ ರೋಗಿ ಸೇವೆ ಸ್ಥಗಿತ ಬೇಡ
ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸದಿರುವಂತೆ ಸಲಹೆ ನೀಡಲಾಗಿದೆ. ಒಂದಕ್ಕಿಂತ ಹೆಚ್ಚು ರೋಗ ಲಕ್ಷಣ ಇರುವವರನ್ನು ಚಿಕಿತ್ಸೆಗಾಗಿ ಮೆಗ್ಗಾನ್‍ಗೆ ಕಳುಹಿಸುವಂತೆ ಸೂಚಿಸಲಾಗಿದ್ದು, ಉಳಿದವರನ್ನು ಖಾಸಗಿ ಆಸ್ಪತ್ರೆಯಲ್ಲಿಯೇ ತಪಾಸಣೆ ನಡೆಸಲು ಸೂಚಿಸಲಾಗಿದೆ ಎಂದರು.
ಕಣ್ಗಾವಲು
ವಿದೇಶದಿಂದ ಬಂದವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಅವರು ಮನೆಯಿಂದ ಯಾವುದೇ ಕಾರಣಕ್ಕೂ ಹೊರಗೆ ಬಾರದಂತೆ ಸೂಚನೆಗಳನ್ನು ನೀಡಲಾಗಿದೆ. ಅಂತವರ ಮನೆಗಳನ್ನು ಗುರುತಿಸಲು ಪೋಸ್ಟರ್‍ಗಳನ್ನು ಹಚ್ಚಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ನಿಗಾ ಇರಿಸಿರುವ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಅಗತ್ಯ ಬಿದ್ದರೆ ನಿಗಾ ವಹಿಸಲು ಸಿಬ್ಬಂದಿ ನೇಮಕ ಮಾಡಲು ಸೂಚಿಸಲಾಗಿದೆ ಎಂದರು.
ಬೆಂಗಳೂರಿನಿಂದ ನಿನ್ನೆ ಸುಮಾರು 500ಕ್ಕೂ ಹೆಚ್ಚು ಮಂದಿ ಜಿಲ್ಲೆಗೆ ಆಗಮಿಸಿದ್ದು, ಎಲ್ಲಾ ವಾಹನಗಳ ಸಂಖ್ಯೆ, ಪ್ರಯಾಣಿಕರ ಮೊಬೈಲ್ ಸಂಖ್ಯೆಗಳನ್ನು ಮುಂಜಾಗರೂಕತಾ ಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.
Get in Touch With Us info@kalpa.news Whatsapp: 9481252093
Discussion about this post