ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಸಚಿವರ ಪುತ್ರ, ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್, ನಿರಂತರ ಪ್ರವಾಸದಿಂದಾಗಿ ಅವರಿಗೆ ಕೊಂಚ ಆಯಾಸವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಕೋವಿಡ್19 ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರು ಆರೋಗ್ಯವಾಗಿದ್ದು, ಯಾವುದೇ ರೀತಿಯ ಆತಂಕಕ್ಕೆ ಕಾರಣಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಯಾರೂ ಸಹ ಗಾಬರಿಯಾಗುವುದು ಬೇಡ ಎಂದಿದ್ದಾರೆ.
ಇನ್ನು ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಈಶ್ವರಪ್ಪ, ನನಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post