ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪದಾಧಿಕಾರಿಗಳು (Shivamogga DC) ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಕೆಪಿಎಸ್‌ಸಿಯಲ್ಲಿ ನಡೆದಿರುವ 400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ₹40 ಲಕ್ಷದಿಂದ ₹80 ಲಕ್ಷದವರೆಗೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ವಿಚಾರಣಾ ಸಮಿತಿ ರಚಿಸಲಾಗಿದೆ.
ಆದರೆ ಈ ಆಂತರಿಕ ವಿಚಾರಣಾ ಸಮಿತಿಯು ಆರೋಪಗಳಿಂದ ಮುಕ್ತರಾಗುವ ಪ್ರಯತ್ನದಂತಿದೆ ಎಂದು ಆರೋಪಿಸಿದ ಮನವಿದಾರರು, ಯಾವುದೇ ಕಾರಣಕ್ಕೂ ಉಪಸಮಿತಿ ತನಿಖೆಗೆ ಅವಕಾಶ ನೀಡದೆ, ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತುರ್ತು ತನಿಖೆಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ತನಿಖಾ ವರದಿ ಬರುವವರೆಗೆ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದರು. ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷ ಶಿವಶಂಕರ್ ಎಸ್. ಸಾಹುಕಾರ್ ಅವರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದು, ಈ ಬಗ್ಗೆಯೂ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Shivamogga : ಕೆಪಿಎಸ್‌ಸಿ ಪ್ರಕರಣದ ಗಂಭೀರ ತನಿಖೆಗೆ ಆಗ್ರಹ
ನೀಟ್ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆದಿರುವುದನ್ನು ಉಲ್ಲೇಖಿಸಿದ ಪದಾಧಿಕಾರಿಗಳು, ಕೆಪಿಎಸ್‌ಸಿಯಲ್ಲಿಯೂ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ಹೇಳಿದರು.
Also read>> Rainfall ಶಿವಮೊಗ್ಗದಲ್ಲಿ ಎಷ್ಟು ಮಳೆ ಕೊರತೆಯಿದೆ? ಡಿಸಿ ಹೇಳಿದ್ದೇನು?
ಇದಕ್ಕೆ ಪೂರಕವಾಗಿ ವೀಡಿಯೋ ಸಂಭಾಷಣೆಗಳು ಸೋರಿಕೆಯಾಗಿದ್ದು, ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುವ ಸಾಧ್ಯತೆ ಇದ್ದು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಹೋರಾಟಕ್ಕೆ ಇಳಿಯುವ ಮುನ್ನವೇ ಸರ್ಕಾರ ಕೆಪಿಎಸ್‌ಸಿ ಅವ್ಯವಹಾರ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಹೆಚ್.ಎಂ. ಸಂಗಯ್ಯ, ಆಲಿಂಖಾನ್, ಕೋಡ್ಲು ಶ್ರೀಧರ್, ಬಸವರಾಜ್ ಕೆ., ಶಂಕ್ರಾನಾಯ್ಕ, ಶಿವಣ್ಣ, ಆದಿಶೇಷ ಎಲ್., ಚಿದಾನಂದಮೂರ್ತಿ ಕೆ.ಎಂ., ರಾಮು ಹಾಗೂ ಕಣ್ಣನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











