ಕಲ್ಪ ಮೀಡಿಯಾ ಹೌಸ್ | ಸಾಗರ (ಶಿವಮೊಗ್ಗ) |
ವೇದಿಕೆಯಲ್ಲಿ ಭಾಷಣ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಒದಗಿಸುವುದೇ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ಶಿವಮೊಗ್ಗ (Shivamogga) ಜಿಲ್ಲಾ ಆಡಳಿತ ಹಾಗೂ ಹೊಸನಗರ ತಾಲೂಕು ಆಡಳಿತದ ವತಿಯಿಂದ ‘ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಹೊಸನಗರದ ಈಡಿಗರ ಭವನದಲ್ಲಿ ಆಯೋಜಿಸಿದ್ದ ‘ಪ್ರಜಾಸೇವೆ ಆಂದೋಲನ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Madhu Bangarappa: ಭಾಷಣಕ್ಕಿಂತ ಜನರ ಸಮಸ್ಯೆಗಳಿಗೆ ಆದ್ಯತೆ
ಕಾರ್ಯಕ್ರಮ ಆರಂಭವಾಗುವುದಕ್ಕಿಂತ 30 ನಿಮಿಷ ಮುಂಚಿತವಾಗಿಯೇ ಸಭಾ ಸ್ಥಳಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ ಅವರು, ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಇಲ್ಲಿ ನಾವು ಭಾಷಣ ಮಾಡುವ ಬದಲು ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸೋಣ. ಕಾರ್ಯಕ್ರಮವನ್ನು ಕೂಡಲೇ ಆರಂಭಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡೋಣ. ಪ್ರಜಾಸೇವೆಯ ಉದ್ದೇಶವನ್ನು ನೀವು ತಿಳಿಸಿ” ಎಂದು ಹೇಳುವ ಮೂಲಕ ವೇದಿಕೆಯ ಭಾಷಣವನ್ನು ಶಾಸಕರಿಗೆ ಬಿಟ್ಟುಕೊಟ್ಟರು.
180 ಅರ್ಜಿಗಳ ಪರಿಶೀಲನೆ
ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸಚಿವರು ವಿಶೇಷ ಆಸಕ್ತಿ ವಹಿಸಿದರು. ಸತತ 2 ಗಂಟೆ 30 ನಿಮಿಷಗಳ ಕಾಲ ಸಭೆಯಲ್ಲಿ ಕುಳಿತು ಸಾರ್ವಜನಿಕರಿಂದ ಬಂದ ಒಟ್ಟು 180 ಅರ್ಜಿಗಳನ್ನು ಪರಿಶೀಲಿಸಿದರು.
ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ಸಚಿವರು, ಉಳಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಭೆಗೆ ಆಗಮಿಸಿದ್ದ ವಯೋವೃದ್ಧರು, ವಿಕಲಚೇತನರು ಹಾಗೂ ಮಕ್ಕಳಿಗೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಅವರು ನೇರವಾಗಿ ತಮ್ಮ ಬಳಿ ಬಂದು ಮನವಿ ಸಲ್ಲಿಸಬಹುದು ಎಂದು ಸಚಿವರು ತಿಳಿಸಿದರು. ಈ ಮೂಲಕ ಸಾರ್ವಜನಿಕರ ಅನುಕೂಲಕ್ಕೆ ವಿಶೇಷ ಆದ್ಯತೆ ನೀಡಿದರು.
ಸಾರ್ವಜನಿಕರು ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಲಿ: ಶಾಸಕ ಬೇಳೂರು
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಜಿಲ್ಲೆಗೆ ಅವರ ಸಹಕಾರ ದೊಡ್ಡದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಜಾಸೇವೆ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿರುವುದರಿಂದ ಜನರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಬೇಕು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
Also Read>> ತಮಿಳಿನ ಜನಪ್ರಿಯ ‘ಸೂಪರ್ ಸಿಂಗರ್’ ವೇದಿಕೆಗೆ ಹೊಸನಗರದ ಅಭಿಜಿತ್ ರಾವ್ ಆಯ್ಕೆ
ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿ
ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ, ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1 ಸುಜಾತ ಕೆ.ಆರ್., ಉಪ ಕಾರ್ಯದರ್ಶಿ-2 ಅನ್ನಪೂರ್ಣ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








