ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಸ್ಎಸ್ಎಲ್ಸಿ ಪರೀಕ್ಷೆಯ (SSLC Exam) ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಸೇರಿದಂತೆ ಇತರ ಬಾಹ್ಯ ಕಾರ್ಯಗಳಿಗೆ ನಿಯೋಜಿಸಲು ಅವಕಾಶ ನೀಡುವುದಿಲ್ಲ. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಒಂದು ವೇಳೆ ಶಿಕ್ಷಕರನ್ನು ಪರೀಕ್ಷಾ ಸಮಯದಲ್ಲಿ ಇಂತಹ ಕಾರ್ಯಗಳಿಗೆ ನಿಯೋಜಿಸುವ ಪರಿಸ್ಥಿತಿ ಎದುರಾದರೆ ಶಿಕ್ಷಕರ ಪರವಾಗಿ ಯಾವುದೇ ಹೋರಾಟಕ್ಕೂ ಸಿದ್ಧನಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಬೆಂಗಳೂರಿನ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ವಲಯದ ಸಂಪನ್ಮೂಲ ಶಿಕ್ಷಕರ ವಿಷಯವಾರು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರ ಆಡಳಿತಾತ್ಮಕ ಕಾರ್ಯಗಳಿಗೆ ನಿಯೋಜಿಸುವುದು ಸೂಕ್ತವಲ್ಲ. ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಬೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳ ಭವಿಷ್ಯವೇ ಸರ್ಕಾರಕ್ಕೆ ಮುಖ್ಯವಾಗಿದ್ದು, ಶಿಕ್ಷಕರಿಗೆ ಅಗತ್ಯ ಸಹಕಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಶಿಕ್ಷಕರ ಹಿತಾಸಕ್ತಿಯನ್ನು ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಶಿಕ್ಷಕರನ್ನು ಯಾವುದೇ ಸಂದರ್ಭದಲ್ಲಿಯೂ ಕೈಬಿಡುವ ಪ್ರಶ್ನೆಯೇ ಇಲ್ಲ. ಎಸ್ಐಆರ್ ಸೇರಿದಂತೆ ಇತರ ವಿಚಾರಗಳನ್ನು ನನಗೆ ಬಿಡಿ. ನೀವು ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವತ್ತ ಗಮನಹರಿಸಿ. ಶಿಕ್ಷಕರ ಪರವಾಗಿ ನಾನಿದ್ದೇನೆ, ಅಗತ್ಯಬಿದ್ದರೆ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡೋಣ ಎಂದು ಹೇಳಿದರು.
Madhu Bangarappa: ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಮಿಷನ್ 70+ ಗುರಿ
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಇಲಾಖೆ ವಿಶೇಷ ಗಮನ ಹರಿಸಿದೆ. ಈಗಾಗಲೇ ಧಾರವಾಡದ ಐಐಟಿಯಲ್ಲಿ ಮಿಷನ್ 60+ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಅದೇ ಮಾದರಿಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಮಿಷನ್ 70+ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು. ನಮ್ಮ ಶಿಕ್ಷಕರ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದ್ದು, ನಿಗದಿಪಡಿಸಿರುವ ಗುರಿಯನ್ನು ಸಾಧಿಸುವ ಶಕ್ತಿ ಅವರಿಗಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸುವುದು, ವಿಷಯವಾರು ಸಿದ್ಧತೆ ಮಾಡಿಸುವುದು ಹಾಗೂ ಪರೀಕ್ಷಾ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿನ ಕಲಿಕಾ ಕೊರತೆಗಳನ್ನು ಗುರುತಿಸಿ, ಅವುಗಳನ್ನು ಸರಿಪಡಿಸಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ಗುರಿಯೊಂದಿಗೆ ಎಲ್ಲ ಶಿಕ್ಷಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ
ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವಿಭಾಷಾ ಮಾಧ್ಯಮ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮವನ್ನು ಜಾರಿಗೆ ತರಲಾಗುವುದು. ವಿದ್ಯಾರ್ಥಿಗಳು ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿಯೂ ಉತ್ತಮ ಜ್ಞಾನ ಹೊಂದಬೇಕು. ಮಾತೃಭಾಷೆಯ ಮೇಲಿನ ಹಿಡಿತವನ್ನು ಉಳಿಸಿಕೊಂಡೇ ಇಂಗ್ಲಿಷ್ ಕಲಿಕೆಗೆ ಆದ್ಯತೆ ನೀಡುವುದರಿಂದ ಭವಿಷ್ಯದಲ್ಲಿ ಮಕ್ಕಳಿಗೆ ಹೆಚ್ಚಿನ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳು ಲಭಿಸಲಿವೆ ಎಂದು ತಿಳಿಸಿದರು.
ಇದಕ್ಕೆ ಉದಾಹರಣೆಯಾಗಿ ತಮ್ಮ ಸಹೋದರಿ ಗೀತಾ ಶಿವರಾಜ್ಕುಮಾರ್ ಅವರ ಶಿಕ್ಷಣವನ್ನು ಉಲ್ಲೇಖಿಸಿದ ಸಚಿವರು, ಅವರು ಶಿವಮೊಗ್ಗದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು, ಇದೇ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಅಧ್ಯಯನ ಮುಂದುವರಿಸಿದ್ದಾರೆ. ನಂತರ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮನೆಯಲ್ಲಿ ಅವರು ಅತ್ಯುತ್ತಮವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಕನ್ನಡ ಮಾಧ್ಯಮದಲ್ಲಿ ಓದಿದರೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಸಾಧಿಸಲು ಸಾಧ್ಯ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಾಗಿದೆ ಎಂದರು.
ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ
ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿರುವುದರಿಂದ ಹೆಚ್ಚುವರಿ ತರಗತಿಗಳನ್ನು ನಡೆಸಲು ಅನುಕೂಲವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿಯೇ ಈ ಸೌಲಭ್ಯದ ಸಕಾರಾತ್ಮಕ ಪರಿಣಾಮ ಕಂಡುಬಂದಿದೆ. ಈ ಬಾರಿಯೂ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ಹೇಳಿದರು.
ಶಿಕ್ಷಣವೆಂಬುದು ಹಣ ಕೊಟ್ಟು ಖರೀದಿಸುವ ವಸ್ತುವಲ್ಲ. ಅದನ್ನು ನಿಜವಾದ ಅರ್ಥದಲ್ಲಿ ಶಿಕ್ಷಕರಿಂದಲೇ ಪಡೆಯಲು ಸಾಧ್ಯ. ಶಿಕ್ಷಕರ ಬಗ್ಗೆ ನನಗೆ ಅಪಾರ ಗೌರವವಿದ್ದು, ಅವರ ಬೋಧನಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಲು ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.
Also Read>> ಹುಬ್ಬಳ್ಳಿ ರೈಲ್ವೆ ವಿಭಾಗದಿಂದ 12,654 ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೃಷ್ಟಿ
ತಂದೆಯ ‘ಅಕ್ಷರ’ ಕಾರ್ಯಕ್ರಮ ಸ್ಮರಣೆ
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ‘ಅಕ್ಷರ’ ಕಾರ್ಯಕ್ರಮವನ್ನು ಸ್ಮರಿಸಿದ ಮಧು ಬಂಗಾರಪ್ಪ, ಈ ಯೋಜನೆಯಡಿ ಪ್ರತಿದಿನ ಮಗುವಿಗೆ ಒಂದು ರೂಪಾಯಿ ಪ್ರೋತ್ಸಾಹಧನ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಿದರು.
ಅದೇ ರೀತಿಯಲ್ಲಿ ಮುಖ್ಯಮಂತ್ರಿಯ ಮಗನಾಗಿ ಶಿಕ್ಷಕರು ಮತ್ತು ಮಕ್ಕಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ತಾನು ಸದಾ ಸಿದ್ಧನಿದ್ದೇನೆ. ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್, ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅನಿತಾ ಡಿಸೋಜಾ, ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










