ಮಂಡ್ಯ: 2019ನೆಯ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಂಡ್ಯ ಅರಕೇಶ್ವರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು 5 ವರ್ಷದ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವುದರ ಮೂಲಕ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್. ಮಂಜುಶ್ರೀ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಯಾಲಕ್ಕಿ ಗೌಡ, 2019ನೆಯ ಸಾಲಿನಲ್ಲಿ ಒಂದೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಮಾರ್ಚ್ 13 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಪಟ್ಟ ಒಟ್ಟು 1,29,990 ಮಕ್ಕಳಿಗೆ ಲಸಿಕೆ ನೀಡಬೇಕಾಗಿದೆ ಎಂದರು.
ಶೇ. 100 ರಷ್ಟು ಸಾಧನೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 723 ಪೋಲಿಯೋ ಬೂತ್‌ಗಳು, 1367 ತಂಡಗಳು, 2453 ಲಸಿಕಾ ಸಿಬ್ಬಂದಿಗಳು, 154 ವಾಹನಗಳನ್ನು ಹಾಗೂ 145 ಮೇಲ್ವಿಚಾರಕರುಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದರು.
ಕೆ.ಆರ್.ಎಸ್, ಮುತ್ತತಿ, ಶಿವನಸಮುದ್ರ, ಸಂಗಮ, ಶಿವನಸಮುದ್ರ ಇಲ್ಲಿಯೂ ಕೂಡ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಮೀರಾ ಶಿವಲಿಂಗಯ್ಯ, ಶೇ. 100 ರಷ್ಟು ಸಾಧನೆ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸೌಕರ್ಯವನ್ನು ಒದಗಿಸಿಕೊಟ್ಟಿದ್ದು ಪೋಷಕರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಬೇಕು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಎಂ. ಶ್ರೀನಿವಾಸ್, ನಗರಸಭೆ ಸದಸ್ಯರಾದ ಸೌಭಾಗ್ಯ, ವಿಶಾಲಾಕ್ಷಿ, ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಮಂಚೇಗೌಡ ಇದ್ದರು.
Discussion about this post