ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಮೆಗ್ಗಾನ್ ಕೊರತೆ ಬಗ್ಗೆ ಪರಿಶೀಲಿಸಲು ಪ್ರತಿ ತಿಂಗಳು ಈ ರೀತಿಯ ಸಭೆಯನ್ನು ನಡೆಸಿ ಸರಿಪಡಿಸಲು ಸೂಚನೆಗಳನ್ನು ನೀಡಲಾಗುವುದು. ಕಳೆದ ಎರಡು ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಮೂರು ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲೆಯ ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ. ಜನರು ಜಿಲ್ಲಾಡಳಿತ ನೀಡಿರುವ ಯಾವುದೇ ಸೂಚನೆಗಳನ್ನು ಮೀರಬಾರದು. ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ತಿಳಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯದಾದ್ಯಂತ ನರೇಗಾ ಅಡಿ ಕಾಮಗಾರಿಗಳನ್ನು ದೊಡ್ಡ ಪ್ರಮಾಣದಲ್ಲಿ ಆರಂಭಿಸಲಾಗುತ್ತಿದೆ. ಈಗಾಗಲೇ ಕೂಲಿ ಹಣವನ್ನು 245ರೂ.ನಿಂದ 275ರೂ. ಗೆ ಹೆಚ್ಚಿಸಲಾಗಿದ್ದು, ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಏಪ್ರಿಲ್ 21ರ ಬಳಿಕ ಲಾಕ್‌ಡೌನ್ ನಿಯಮಗಳಲ್ಲಿ ಸಡಿಲಿಕೆಯನ್ನು ನಿರೀಕ್ಷಿಸಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗುತ್ತಿದೆ. ಜನರಿಗೆ ಆಹಾರ ಪದಾರ್ಥ, ಕಿಟ್‌ಗಳನ್ನು ಒದಗಿಸಲು ಹಲವು ಸಂಘ ಸಂಸ್ಥೆಗಳು ಮುಂದೆ ಬರುತ್ತಿದ್ದು, ಆದರೆ ಈ ಕಾರ್ಯಕ್ಕಾಗಿ ಜಿಲ್ಲಾಡಳಿತದಿಂದ ಅನುಮತಿಯನ್ನು ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕೋವಿಡ್‌ಗಿಂತ ಮೊದಲು ಮೆಗ್ಗಾನ್ ಆಸ್ಪತ್ರೆಯಿಂದ ಎಷ್ಟು ಪ್ರಕರಣಗಳನ್ನು ಬೇರೆ ಖಾಸಗಿ ಅಥವಾ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪರಿಶೀಲಿಸಿದರೆ, ಮೆಗ್ಗಾನ್ ಕಾರ್ಯನಿರ್ವಹಣೆಯನ್ನು ಅರ್ಥ ಮಾಡಿಕೊಳ್ಳಬಹುದು ಎಂದರು. ಇನ್ನು ಮುಂದೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುವ ಪ್ರಕರಣಗಳ ಮಾಹಿತಿಯನ್ನು ಸರಿಯಾಗಿ ದಾಖಲಿಸುವಂತೆ ಸಚಿವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಆಶಾ ಕಾರ್ಯಕರ್ತೆಯರ ತಂಡ 60ಸಾವಿರ ಮನೆಗಳಲ್ಲಿ ಆರೋಗ್ಯ ಪರಿಶೀಲನೆ ನಡೆಸಿದೆ. ಈ ಪ್ರಕ್ರಿಯೆಯನ್ನು ಆಯ್ದ ಗ್ರಾಮೀಣ ಪ್ರದೇಶಗಳಲ್ಲಿ ಸಹ ಕೈಗೊಳ್ಳಲಾಗುವುದು. ಜಿಲ್ಲೆಯ ಒಳಗೆ ಪ್ರವೇಶಿಸುವ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಲಾಗುತ್ತಿದೆ. ಹೋಂ ಕ್ವಾರೆಂಟೈನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ತೀವ್ರ ನಿಗಾ ಇರಿಸಲಾಗುತ್ತಿದೆ ಎಂದು ಹೇಳಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ರುದ್ರೇಗೌಡ, ಪ್ರಸನ್ನ ಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್.ವೈಶಾಲಿ, ಶಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ ಮತ್ತಿತರರು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post