ಕಲ್ಪ ಮೀಡಿಯಾ ಹೌಸ್
ಮೈಸೂರು: ದಿನದಿಂದ ದಿನಕ್ಕೆ ಕೋವಿಡ್19 ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 29ರಿಂದ ಜೂನ್ 7ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ಆದೇಶ ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಲಾಕ್‌ಡೌನ್ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ವಾರದಲ್ಲಿ 2 ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಯಾರೂ ಆತಂಕಗೊಳ್ಳದೇ ಸಮಾಧಾನದಿಂದ ವಸ್ತುಗಳನ್ನು ಖರೀದಿಸಬೇಕು. ಅಂದರೆ, ಅಂಗಡಿಗಳ ಮುಂದೆ ಗುಂಪು ಸೇರುವುದು, ಮುಗಿ ಬೀಳುವಂತಹ ಕಾರ್ಯಗಳನ್ನು ಮಾಡಬಾರದು. ಸಾಮಾಜಿಕ ಅಂತರವನ್ನು ಎಲ್ಲರೂ ಪಾಲಿಸುವುದರ ಜೊತೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನೂ ಸಹ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯೇಕ ಹಾಲಿನ ಬೂತ್‌ಗಳು, ವೈದ್ಯಕೀಯ ಸೇವೆಗಳು, ಹಾಪ್‌ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ನ್ಯಾಯಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ರೀತಿಯ ಚಟುವಟಿಕೆಗಳಿಗೂ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಅನಗತ್ಯ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















