ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು. ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ. 371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post