ಶಿವಮೊಗ್ಗ: ಜಿಲ್ಲೆಯಲ್ಲಿ ನೆರೆ ಪರಿಹಾರ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ತಕ್ಷಣ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ರಾಜ್ಯದಲ್ಲಿ ನೆರೆ ಪರಿಹಾರ ಕಾಮಗಾರಿಗಳಿಗೆ ಈಗಾಗಲೇ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತುರ್ತು ಕಾರ್ಯಗಳನ್ನು ಕೈಗೊಳ್ಳಲು ಇಂದೇ 10 ಕೋಟಿ ರೂ. ಅನುದಾನ ಹೆಚ್ಚುವರಿಯಾಗಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಪ್ರಧಾನಮಂತ್ರಿ ಅವರು ಸೆಪ್ಟಂಬರ್ ಪ್ರಥಮ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನೆರೆ ಪರಿಹಾರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ನೆರೆ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ನೆರೆಪೀಡಿತರಾದ 6089 ಕುಟುಂಬಗಳಿಗೆ ತಲಾ 10 ಸಾವಿರದಂತೆ ಪರಿಹಾರದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. 11 ಮಾನವ ಜೀವ ಹಾನಿ ಪ್ರಕರಣಗಳಲ್ಲಿ ಸಹ ತಲಾ ಐದು ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಒಟ್ಟು 4048 ಮನೆಗಳಿಗೆ ಹಾನಿ ಉಂಟಾಗಿದೆ. ಮನೆ ಹಾನಿ ಕುರಿತು ಜಿಪಿಎಸ್ ಮಾಡಿಸಲಾಗುತ್ತಿದ್ದು, 1531 ಪ್ರಕರಣಗಳಲ್ಲಿ ಮನೆಯ ಸೂಕ್ತ ದಾಖಲೆಗಳು ಇರುವುದಿಲ್ಲ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ತಾತ್ಕಾಲಿಕ ಪರಿಹಾರ ಒದಗಿಸಲು ಬಿಟ್ಟು ಹೋಗಿರುವ ಕುಟುಂಬಗಳು ಇದ್ದರೆ ಅವರನ್ನು ಗುರುತಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಜಾನುವಾರುಗಳ ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದ್ದರೆ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಒದಗಿಸಬೇಕು. ನಷ್ಟ ಅಂದಾಜು ಮಾಡುವ ಸಂದರ್ಭದಲ್ಲಿ ಸ್ವಲ್ಪ ಉದಾರತೆಯನ್ನು ತೋರಬೇಕು ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಮರಳಿಗೆ ಸಮಸ್ಯೆ ಮಾಡಬೇಡಿ: ಬಡವರು ಮನೆ ಕಟ್ಟಲು ಸಾಗಾಟ ಮಾಡುವ ಮರಳನ್ನು ಹಿಡಿದು ಕಿರುಕುಳ ನೀಡುವ ದೂರುಗಳು ಇನ್ನು ಬರಬಾರದು. ಇಂತಹ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಇದಕ್ಕೂ ಮೊದಲು ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಳೆ ಜೈಲು ಆವರಣದಲ್ಲಿ ಉದ್ಯಾನವನ ಸೇರಿದಂತೆ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನೀಲ ನಕಾಶೆಯನ್ನು ಅಧಿಕಾರಿಗಳು ಈಗಾಗಲೇ ಸಲ್ಲಿಸಿದ್ದಾರೆ. ಇದಕ್ಕೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭಿಸಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ 39 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವರ್ತುಲ ರಸ್ತೆ ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ವಿಜಯ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್, ಶಾಸಕರಾದ ಅಶೋಕ ನಾಯ್ಕ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ, ರುದ್ರೇಗೌಡ, ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Discussion about this post