ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ರಾಜ್ಯದ ಭದ್ರತೆಗಾಗಿ ಹಗಲಿರುಳು ಶ್ರಮಿಸುವ ಪೊಲೀಸರಿಗೆ #Police ಸಂಬಳವೇ ನೀಡದಂತಾಗಿರುವ ಪರಿಸ್ಥಿತಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿಗಳೂ ಆದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #DSArun ಟೀಕಿಸಿದ್ದಾರೆ.
ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಅನುದಾನ ಕೊರತೆಯಿಂದ ರಾಜ್ಯದ ಕೆಲವು ಕಡೆ ಪೊಲೀಸ್ ಸಿಬ್ಬಂದಿಗೆ ಸಂಬಳ ಪಾವತಿಯಲ್ಲಿ ವಿಳಂಬವಾಗುತ್ತಿರುವುದು ಅತ್ಯಂತ ದುಃಖಕರ ಮತ್ತು ಚಿಂತಾಜನಕ ಸಂಗತಿ ಎಂದು ಹೇಳಿದರು.
ಹಗಲು ರಾತ್ರಿ ಭೇದವಿಲ್ಲದೆ ಜನರ ಭದ್ರತೆಗೆ ಶ್ರಮಿಸುವ ಪೊಲೀಸರೇ ಇಂದು ತಮ್ಮ ಕುಟುಂಬದ ಜೀವನೋಪಾಯಕ್ಕಾಗಿ ಸಂಕಷ್ಟ ಅನುಭವಿಸುವಂತಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ಟೀಕಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯದ ಆಡಳಿತ ಎಷ್ಟು ದುರ್ಬಲವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.
ಸರ್ಕಾರ ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ, ಪೊಲೀಸರಿಗೆ ಸಂಬಳ ನೀಡುವುದಲ್ಲಿಯೂ ವಿಳಂಬವಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.
ತಕ್ಷಣವೇ ಪೊಲೀಸ್ ಇಲಾಖೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಬಾಕಿ ಉಳಿದಿರುವ ಸಂಬಳವನ್ನು ಶೀಘ್ರ ಪಾವತಿಸುವ ಕ್ರಮ ಕೈಗೊಳ್ಳಬೇಕು. ಜೊತೆಗೆ ಇಂತಹ ಪರಿಸ್ಥಿತಿ ಮರುಕಳಿಸದಂತೆ ಸಮರ್ಪಕ ಹಣಕಾಸು ವ್ಯವಸ್ಥೆ ರೂಪಿಸಲು ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರನ್ನು ಅವರು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















