ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ .ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ ೩೫ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆಯಲ್ಲಿ ಪತ್ರಕರ್ತರು ವ್ರತ್ತಿಪರ ಮೌಲ್ಯವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯನಿರ್ವಹಿಸುವುದು ಸವಾಲಿನ ಕಾರ್ಯ ಎಂದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪರಿಣಾಮಕಾರಿಯಾದದ್ದು. ಪತ್ರಿಕೋದ್ಯಮವು ವಾಣೀಜ್ಯೀಕರಣಗೊಳ್ಳದೆ ಟ್ರಸ್ಟ್ ಕಾಯಿದೆಗೊಳಪಟ್ಟರೆ ಮಾಧ್ಯಮಗಳು ಮತ್ತು ಪತ್ರಕರ್ತರು ನೈತಿಕ ಸ್ಥೈರ್ಯವನ್ನು ಇನ್ನಷ್ಟು ಬಲಗೊಳಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿತ್ತು ಎಂದವರು ಅಭಿಪ್ರಾಯಪಟ್ಟರು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನದ ಉದ್ಘಾಟನೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯಿತು.
ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಿದರು.
ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ವಂದಿಸಿದರು. ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
(ವರದಿ: ಡಿ.ಎಲ್. ಹರೀಶ್)
Get in Touch With Us info@kalpa.news Whatsapp: 9481252093
Discussion about this post