ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಮತ್ತಷ್ಟು ದಟ್ಟವಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತ ರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ (Politics) ಹೊಸ ಚರ್ಚೆಗೆ ಕಾರಣವಾಗಿದೆ.
ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಯಶವಂತ ರಾಯಗೌಡ ಪಾಟೀಲ್ ಅವರಿಗೆ ಅಂತಿಮ ಪಟ್ಟಿಯಲ್ಲಿ ಅವಕಾಶ ದೊರೆಯಲಿಲ್ಲ. ಇದರ ಬೆನ್ನಲ್ಲೇ ಅವರು ಹಂಗಾಮಿ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.
Politics : ಶಾಸಕ ಸ್ಥಾನಕ್ಕೆ ರಾಜೀನಾಮೆ
ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅವರು ಅಲ್ಲಿಂದ ತೆರಳಿದರು. ಹಂಗಾಮಿ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ರಾಜೀನಾಮೆ ಪತ್ರವನ್ನು ವಿಧಾನಸಭೆ ಕಾರ್ಯದರ್ಶಿಗೆ ರವಾನಿಸಿದ್ದು, ಮುಂದಿನ ಪ್ರಕ್ರಿಯೆ ನಿಯಮಾನುಸಾರ ನಡೆಯಲಿದೆ.

ಇನ್ನೊಂದೆಡೆ, ತಮ್ಮ ನಾಯಕನಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಯಶವಂತ ರಾಯಗೌಡ ಪಾಟೀಲ್ ಅವರ ಬೆಂಬಲಿಗರು ಶಾಸಕರ ಭವನದ ಬಳಿ ಪ್ರತಿಭಟನೆ ನಡೆಸಿದರು. ಕೈಯಲ್ಲಿ ಶಾಸಕರ ಭಾವಚಿತ್ರ ಹಿಡಿದು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಚಿವ ಸಂಪುಟ ರಚನೆಯಲ್ಲಿ ತಮ್ಮ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ ಅವರು, ಪಕ್ಷದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದರು.
Also read>> ಕೊಡಗಿನಲ್ಲಿ ಮಳೆ ಆರ್ಭಟ | ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ | ಜನಜೀವನ ಅಸ್ತವ್ಯಸ್ತ
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನ ಹಲವು ಶಾಸಕರು ಹಾಗೂ ಬೆಂಬಲಿಗರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಯಶವಂತ ರಾಯಗೌಡ ಪಾಟೀಲ್ ಅವರ ರಾಜೀನಾಮೆ ಪಕ್ಷದೊಳಗಿನ ಭಿನ್ನಮತವನ್ನು ಮತ್ತಷ್ಟು ಬಹಿರಂಗಪಡಿಸಿದೆ. ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










