ಕಲ್ಪ ಮೀಡಿಯಾ ಹೌಸ್ | ಬೀದರ್ |
ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಬುಧವಾರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ವ್ಯಾಪಕ ಪ್ರವಾಸ ಕೈಗೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಗ್ರಾಮವಾರು ಪ್ರಗತಿಯನ್ನೂ ಪರಿಶೀಲಿಸಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ, ಗ್ರಾಮಸ್ಥರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಶಾಸಕರು ಅಷ್ಟೂರ, ಗುನ್ನಳ್ಳಿ, ಚಿಟ್ಟಾ, ನಾಗೂರಾ, ಮನ್ನಳ್ಳಿ, ರಾಜಗೀರಾ ಸೇರಿ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿದರು. ಪ್ರತಿಯೊಂದು ಗ್ರಾಮದಲ್ಲೂ ಸಾರ್ವಜನಿಕರು ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಶಿಕ್ಷಣ, ಆರೋಗ್ಯ, ಅಂಗನವಾಡಿ, ಗ್ರಾಮ ಪಂಚಾಯಿತಿ ಮೂಲಸೌಕರ್ಯ, ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ಶಾಸಕರು ಮನವಿಗಳನ್ನು ಆಲಿಸಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
Also read: ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್, ದಾಖಲಾಯ್ತು ಕೇಸ್
ಪ್ರವಾಸದ ವೇಳೆ ಈಗಾಗಲೇ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಿ, ಕಾಮಗಾರಿಗಳು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಕಾರಣಕ್ಕೂ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಕುರಿತು ಗ್ರಾಮವಾರು ಪರಿಶೀಲನೆ ನಡೆಸಿದ ಶಾಸಕರು, ಅರ್ಹ ಪ್ರತಿಯೊಬ್ಬ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಹೊಸ ಮತದಾರರ ನೋಂದಣಿ, ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ ಹಾಗೂ ಮೃತ ಅಥವಾ ಸ್ಥಳಾಂತರಗೊಂಡ ಮತದಾರರ ವಿವರಗಳನ್ನು ನಿಯಮಾನುಸಾರ ಪರಿಷ್ಕರಿಸುವ ಕಾರ್ಯವನ್ನು ಜವಾಬ್ದಾರಿಯುತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಂಬಂಧಪಟ್ಟವರು ಮನೆಮನೆಗೆ ಭೇಟಿ ನೀಡಿ ಮತದಾರರಿಗೆ ಅಗತ್ಯ ಮಾಹಿತಿ ನೀಡಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಕಾಳಜಿ ವಹಿಸಬೇಕು. ಎಸ್‌ಐಆರ್ ಕಾರ್ಯವು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ವ್ಯವಸ್ಥೆ ನಿರ್ಮಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ನಿರಂತರ ಭೇಟಿ ನೀಡಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸಲಾಗುತ್ತಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಜನರ ಜೀವನಮಟ್ಟ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಪ್ರವಾಸದ ಅವಧಿಯಲ್ಲಿ ವಿವಿಧ ಗ್ರಾಮಗಳ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಬಿಜೆಪಿ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಬಿಎಲ್ಎ-2, ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಹಾಗೂ ಎಸ್‌ಐಆರ್ ಕಾರ್ಯದ ಕುರಿತು ತಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






