ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ-2020ರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮೊದಲನೆ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಡಿ.20ರ ಸಂಜೆ 5 ಗಂಟೆಯಿಂದ 22ರ ಸಂಜೆ 5 ಗಂಟೆಯವರೆಗೂ ಕಲಂ 144 ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಅವರು, ಈ ಅವಧಿಯಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆಗಳನ್ನು ನಡೆಸುವಂತಿಲ್ಲ. 5 ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯವಾಗುವಂತಹ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಕಲ್ಲು, ಬಾಟಲಿ ಅಥವಾ ಯಾವುದೇ ಎಸೆಯುವ ಅಸ್ತ್ರಗಳನ್ನು ಸಂಗ್ರಹಿಸುವುದು ಅಥವಾ ತಯಾರಿಸುವಂತಿಲ್ಲ. ಪ್ರಚೋಧನಾಕಾರಿ ಭಾಷಣ ಮಾಡುವಂತಿಲ್ಲ ಹಾಗೂ ಬ್ಯಾನರ್ ಅಥವಾ ಫ್ಲೆಕ್ಸ್‌ಗಳನ್ನು ಅಂಟಿಸುವಂತಿಲ್ಲ ಎಂದಿದ್ದಾರೆ.
ಈ ನಿಷೇಧಾಜ್ಞೆ ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಚುನಾವಣಾ ಕಾರ್ಯಚರಣೆ ಅಧಿಕಾರಿಗಳಿಗೆ, ಚುನಾವಣಾ ಏಜೆಂಟ್‌ರವರೆಗೆ ಅನ್ವಯಿಸತಕ್ಕದಲ್ಲ ಎಂದಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸುವವರು ವಿರುದ್ಧ ಭಾ.ದಂ.ಸಂ.ಕಲಂ 188ರ ಪ್ರಕಾರ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post