ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಜಾತಿ, ಪಂಥಗಳನ್ನು ಮೀರಿ ಅರ್ಹತೆಯಿಂದ ಬೆಳೆದು ರಾಷ್ಟ್ರನಾಯಕರಾದವರು ಡಾ.ಬಿ.ಆರ್.ಅಂಬೇಡ್ಕರ್ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅಭಿಪ್ರಾಯಪಟ್ಟರು.
ಕುವೆಂಪು ವಿವಿಯ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬೌದ್ಧ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 130ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆಳ ಸಮೂದಾಯ, ಆರ್ಥಿಕವಾಗಿ ಹಿಂದುಳಿದ, ಸಮಾಜಿಕವಾಗಿ ಹಿಂದುಳಿದ ಜನರಿಗೆ ಹೊಸ ಜೀವನ ಕಲ್ಪಿಸಿಕೊಟ್ಟು, ವಿಶ್ವವೇ ಬೆರಗಾಗುವಂತಹ ಪದವಿಗಳನ್ನು ಪಡೆದವರು ಡಾ.ಬಿ.ಆರ್. ಅಂಬೇಡ್ಕರ್, ದೇಶದ ಪ್ರತಿಯೊಬ್ಬ ನಾಗರಿಕನೂ ಸಾರ್ವಜನಿಕ ಜೀವನದಲ್ಲಿ ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ರಾಷ್ಟ್ರಪ್ರೇಮವನ್ನು ವ್ಯಕ್ತಪಡಿಸಬೇಕು ಎಂದರು.
ಜಗತ್ತಿನ ಸ್ಫೂರ್ತಿದಾಯಕ ನಾಯಕರಲ್ಲಿ ಒಬ್ಬರಾದ ಅಂಬೇಡ್ಕರ್, ಆರ್ಥಿಕ ತಜ್ಞರಾಗಿ, ನ್ಯಾಯವಾದಿಯಾಗಿ, ಕಾರ್ಮಿಕ ನಾಯಕನಾಗಿ, ಸಮಾಜ ಸುಧಾರಕನಾಗಿ ವಿವಿಧ ಕ್ಷೇತ್ರಗಳಿಗೆ ಕೊಡುಗೆ ನೀಡಿದವರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಿದರೆ ಮಾತ್ರ ಸಾಲದು ಬದಲಾಗಿ ಅವರು ಆದರ್ಶ ಮತ್ತು ತತ್ವಗಳನ್ನು ತಮ್ಮ ಜೀವನದಲ್ಲಿ ಹಾಗೂ ಅವರವರ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಕುಲಸಚಿವ ಪ್ರೊ. ಎಸ್.ಎಸ್.ಪಾಟೀಲ್, ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಕಣ್ಣನ್, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಅಂಜನಪ್ಪ, ಅಣ್ಣಯ್ಯ ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು, ಅಧ್ಯಾಪಕೇತರ ನೌಕರರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post