ಕಲ್ಪ ಮೀಡಿಯಾ ಹೌಸ್ | ಸೊರಬ (ಶಿವಮೊಗ್ಗ) |
ಶರಾವತಿ (Sharavathi) ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಸಂಬಂಧ ಕೇಂದ್ರ ಸರ್ಕಾರದ ಅನುಮತಿ ಪಡೆಯಲು ಅಗತ್ಯವಿರುವ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೊರಬದ ಪ್ರವಾಸಿ ಮಂದಿರದಲ್ಲಿ ಶನಿವಾರ ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಅಧಿಕಾರಿಗಳೊಂದಿಗೆ ಅಂತಿಮ ಹಂತದ ಸಭೆ ನಡೆಸಿ ಅವರು ಮಾತನಾಡಿದರು.
ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಅನುಮತಿ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತಾವನೆ ಸಲ್ಲಿಸುವ ಕಾರ್ಯದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ದಾಖಲೆ, ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಲು ಸೂಚನೆ
ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಗೆ ಅಗತ್ಯವಿರುವ ಎಲ್ಲ ದಾಖಲೆಗಳು, ಅಂಕಿ-ಅಂಶಗಳು ಹಾಗೂ ಸಂಬಂಧಿತ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ನಿಯಮಾನುಸಾರ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪ್ರಸ್ತಾವನೆಯನ್ನು ಶೀಘ್ರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಬೇಕಾದ ಪ್ರಮುಖ ಅಂಶಗಳು, ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವನೆಯಲ್ಲಿ ಸೇರ್ಪಡೆಗೊಳಿಸಬೇಕಾದ ದಾಖಲೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
Sharavathi: ಯಾವುದೇ ಅಂಶ, ದಾಖಲೆ ಬಾಕಿ ಉಳಿಯದಂತೆ ಎಚ್ಚರಿಕೆ
ಶರಾವತಿ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆ ಅತ್ಯಂತ ಸಮಗ್ರವಾಗಿರಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಪ್ರಸ್ತಾವನೆ ಸಿದ್ಧಪಡಿಸುವ ಸಂದರ್ಭದಲ್ಲಿ ಯಾವುದೇ ಪ್ರಮುಖ ಅಂಶ ಅಥವಾ ಅಗತ್ಯ ದಾಖಲೆ ಬಾಕಿ ಉಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
Also Read>> 19 ರನ್ಗಳ ಗೆಲುವು, ಚಿನ್ನದ ಸಂಭ್ರಮ; ಏಷ್ಯನ್ ಗೇಮ್ಸ್ನಲ್ಲಿ ಪಾಕ್ಗೆ ಸೋಲುಣಿಸಿದ ಭಾರತ!
ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದ್ದು, ಅಗತ್ಯ ಮಾಹಿತಿಯನ್ನು ಕ್ರೋಢೀಕರಿಸಿ ತ್ವರಿತವಾಗಿ ಮುಂದಿನ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಡಿಎಫ್ಒ ಅಜ್ಜಯ್ಯ, ಎಡಿಸಿ ಅಭಿಷೇಕ್, ವಕೀಲ ರಮೇಶ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











