ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಅನಾವರಣ ಮಾಡಬೇಕೆಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಸಂಸ್ಥೆಯ ಪ್ರತಿನಿಧಿಗಳಾದ ಡಾ.ಜಿ.ಎಸ್. ಶಿವಕುಮಾರ ತಿಳಿಸಿದರು.
ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ , ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ #B S Yadiyurappa ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು #Science Quiz Program ಉದ್ಘಾಟಿಸಿ ಮಾತನಾಡಿದರು.
ಶ್ರದ್ಧೆ ಮತ್ತು ಏಕಾಗ್ರತೆಗಳೊಂದಿಗೆ ನಿರಂತರ ಪರಿಶ್ರಮದಿಂದ ಶಿಸ್ತಿನ ಶಿಕ್ಷಣ ಪಡೆಯಬೇಕು. ದೂರದೃಷ್ಟಿ ಪ್ರಜ್ಞೆಯಿಂದ ಸೃಜನಾತ್ಮಕ ಶೈಕ್ಷಣಿಕ ಕೌಶಲ್ಯಗಳನ್ನು ಸೂಕ್ತ ಸಮಯದಲ್ಲಿ ಕರಗತ ಮಾಡಿಕೊಳ್ಳುತ್ತಾ ಉತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕು. ದಿನನಿತ್ಯದ ಕಾರ್ಯಚಟುವಟಿಕೆಗಳಿಂದ ದೊರಕುವ ಬದುಕಿನ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಸಮಯವನ್ನು ವ್ಯರ್ತ ಮಾಡದೆ ಉತ್ತಮ ನಾಯಕತ್ವಗುಣಗಳನ್ನು ಸಂಪಾದಿಸಿಕೊಳ್ಳಬೇಕು. ದೃಢ ಆತ್ಮವಿಶ್ವಾಸದೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳುತ್ತಾ ಸಮಾಜದಲ್ಲಿ ಮಾನವೀಯ ಮೌಲ್ಯ ಮತ್ತು ಶಿಕ್ಷಣದ ಮಹತ್ವವನ್ನು ಎತ್ತಿಹಿಡಿಯಬೇಕು. ನೀವು ಕಲಿತ ವಿದ್ಯೆ ನಿಮಗೆ ವಿನಯ ನೀಡುತ್ತದೆ. ಆ ವಿನಯವನ್ನು ಬದುಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯದ ಬದುಕು ಸುಂದರವಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗುರು ಮತ್ತು ಪೋಷಕರ ಮಾರ್ಗದರ್ಶನ ಅರಿತು ಸನ್ನಡತೆಯಲ್ಲಿ ಸಾಗಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಪ್ರಾಚಾರ್ಯರಾದ ಶ್ರೀಯುತ ವಿಶ್ವನಾಥ ಪಿ ರವರು ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ವಿದ್ಯೆಯ ಜೊತೆಗೆ ನಿಮ್ಮ ಆಸಕ್ತಿಗನುಗುಣವಾದ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ನಿಮ್ಮಲ್ಲಿರುವ ಬುದ್ಧಿ ಶಕ್ತಿಯನ್ನು ಪ್ರದರ್ಶಿಸಬೇಕು. ಯಾವುದೇ ಕ್ಷೇತ್ರದಲ್ಲಾದರೂ ಗುರಿ ಇದ್ದರೆ ಯಶಸ್ಸು ನಿಮ್ಮದಾಗುತ್ತದೆ. ವಿರಾಮದ ಸಮಯದಲ್ಲಿ ತಮ್ಮ ಆಸಕ್ತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸದೃಢ ಸಮಾಜದ ಜೊತೆಗೆ ನಮ್ಮ ದೇಹವನ್ನು ಆರೋಗ್ಯದಿಂದ ಇಟ್ಟುಕೊಳ್ಳಲು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹ ನೀಡಬೇಕೆಂದರು.
ರಸಪ್ರಶ್ನೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕುಮದ್ವತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಕುಮಾರಸ್ವಾಮಿ.ಬಿ.ಎಮ್ ರವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.ತಾಲೂಕಿನ 12 ಪ್ರಾಥಮಿಕ ಶಾಲೆ ಮತ್ತು 12 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕು.ಭವ್ಯ ಮತ್ತು ಸಂಗಡಿಗರು ಪ್ರಾರ್ಥಿಸಿ,ಕು. ಎಮ್.ಜಿ. ಚಂದನ್ ಸ್ವಾಗತಿಸಿ, ಕು.ರಂಜಿತ ವಂದಿಸಿ, ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















