ಶಿವಮೊಗ್ಗ: ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಬೇಸಿಗೆಯಲ್ಲಿ 216 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಬಹುದು ಎಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಕ್ರಮಗಳನ್ನು ಕೈಗೊಳ್ಳಬೇಕು. ಪೈಪ್‌ಲೈನ್ ಅಳವಡಿಕೆ, ಕುಡಿಯುವ ನೀರಿನ ಮೂಲಗಳನ್ನು ಗುರುತಿಸುವುದು ಇತ್ಯಾದಿ ಕ್ರಮಗಳನ್ನು ಕೈಗೊಳ್ಳಬೇಕು. ಶಿವಮೊಗ್ಗ ನಗರದಲ್ಲಿ ಕೆಲವು ಏರಿಯಾಗಳಲ್ಲಿ 24್ಡ7 ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಟಾನಗೊಳಿಸಲಾಗಿದ್ದರೂ, ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ ಎಂಬ ದೂರುಗಳಿವೆ. ಇದನ್ನು ಸರಿಪಡಿಸಬೇಕು ಎಂದು ಸೂಚಿಸಿದರು.
ಬೆಳೆಯುತ್ತಿರುವ ಶಿವಮೊಗ್ಗ ನಗರದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನೀರಿನ ಮರು ಬಳಕೆ, ತ್ಯಾಜ್ಯ ನೀರು ಸಂಸ್ಕರಣೆ ಇತ್ಯಾದಿಗಳ ಕುರಿತು ಯೋಜನೆ ಸಿದ್ಧಪಡಿಸಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅನುಷ್ಟಾನಗೊಳಿಸಬಹುದಾಗಿದೆ ಎಂದು ಅವರು ಹೇಳಿದರು.
ಬರ ಪರಿಹಾರ:
ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸೊರಬ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ತಾಲೂಕುಗಳಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದವರು ತಿಳಿಸಿದರು.
ಅಂಗನವಾಡಿಗಳಿಗೆ ನಿವೇಶನ:
ಎಲ್ಲಾ ಅಂಗನವಾಡಿಗಳು ಸ್ವಂತ ಕಟ್ಟಡದಲ್ಲಿ ನಡೆಯಬೇಕಾಗಿದ್ದು, ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ಗುರುತಿಸಬೇಕು. ಪ್ರಸ್ತುತ 1902 ಅಂಗನವಾಡಿಗಳಿಗೆ ಸ್ವಂತ ಕಟ್ಟಡವಿದ್ದು, 200 ಅಂಗನವಾಡಿಗಳು ನಿರ್ಮಾಣ ಹಂತದಲ್ಲಿವೆ. 252 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, 102 ಅಂಗನವಾಡಿಗಳಿಗೆ ನಿವೇಶನ ಗುರುತಿಸಲಾಗಿದೆ. ಇನ್ನುಳಿದ ಅಂಗನವಾಡಿಗಳಿಗೆ ನಿವೇಶನ ಗುರುತಿಸುವ ಕಾರ್ಯವನ್ನು ಆದಷ್ಟು ಬೇಗನೆ ಮಾಡುವಂತೆ ಅವರು ಸೂಚಿಸಿದರು.
ವೃದ್ಧಾಪ್ಯ ವೇತನ ಇತ್ಯಾದಿ ಸೌಲಭ್ಯಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅಂಗವಿಕಲ ಅಭ್ಯರ್ಥಿಗಳಿಗೆ ನೆರವು ನೀಡುವಂತೆ ಅವರು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮೇಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Discussion about this post