ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿಶ್ವದ ಹಲವೆಡೆ ಕಾಣಿಸಿಕೊಂಡಿರುವ ಕರೋನಾ ವೈರಸ್ ಶಿವಮೊಗ್ಗ ಜಿಲ್ಲೆಯಲ್ಲಿ ಹರಡದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಕರೋನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಜಿಲ್ಲೆಯಲ್ಲಿ ಇದುವರೆಗೆ ಕರೋನಾ ವೈರಸ್‍ನ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಶಂಕಿತ ವೈರಸ್ ಪೀಡಿತರ ಮೇಲೆ ನಿಗಾ ಇರಿಸಲಾಗಿದೆ. ಕರೋನಾ ವೈರಸ್ ಪೀಡಿತ ದೇಶಗಳಿಗೆ ಪ್ರವಾಸ ಕೈಗೊಂಡು ಜಿಲ್ಲೆಗೆ ಆಗಮಿಸಿರುವವರನ್ನು ಸೂಕ್ಷ್ಮ ನಿಗಾದಲ್ಲಿರಿಸಲಾಗಿದೆ. ಅವರಲ್ಲಿ ಕರೋನಾ ವೈರಸ್ ಪತ್ತೆಯಾಗಿರಿಸದಿದ್ದರೂ, ನಾಲ್ಕು ವಾರಗಳ ಕಾಲ ನಿಗಾದಲ್ಲಿರಿಸಲಾಗುವುದು. ಕರೋನಾ ವೈರಸ್ ಪತ್ತೆಯಾಗಿರುವ ದೇಶಗಳಿಗೆ ಸಧ್ಯಕ್ಕೆ ಪ್ರವಾಸ ಕೈಗೊಳ್ಳದಂತೆ ನಾಗರಿಕರಿಗೆ ಸಲಹೆ ನೀಡಲಾಗಿದೆ. ವಿದೇಶದಿಂದ ಆಗಮಿಸಿದ ವ್ಯಕ್ತಿಗಳಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದರೆ ಸ್ವಯಂ ಚಿಕಿತ್ಸೆ ನಡೆಸದೆ ಆಸ್ಪತ್ರೆಗೆ ಬಂದು ದಾಖಲಾಗಬೇಕು ಎಂದು ಅವರು ಹೇಳಿದರು.
ಮುಂಜಾಗರೂಕತಾ ಕ್ರಮ: ಕರೋನಾ ವೈರಸ್ ಪೀಡಿತರ ತಪಾಸಣೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 6ಹಾಸಿಗೆಯ ಪ್ರತ್ಯೇಕ ಘಟಕವನ್ನು ಆರಂಭಿಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಔಷಧಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಕರೋನಾ ವೈರಸ್ ತಡೆಗೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ದಿನ ಸಂಜೆ 6ಗಂಟೆಯ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕರೋನಾ ವೈರಸ್ ಕುರಿತಾಗಿ ವರದಿಯನ್ನು ಸಲ್ಲಿಸಬೇಕು. ಸಾರ್ವಜನಿಕರಿಗೆ ಮಾಹಿತಿ ಒದಗಿಸಲು 24×7 ಕಂಟ್ರೋಲ್ ರೂಂ ಆರಂಭಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳು ಕೈಗಳನ್ನು ಸರಿಯಾಗಿ ತೊಳೆದು ಸ್ವಚ್ಛವಾಗಿರುವಂತೆ ಸೂಚನೆ ನೀಡಬೇಕು. ಎಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್ ಒದಗಿಸಬೇಕು. ಅಂಗಡಿಗಳಲ್ಲಿ ಮಾಸ್ಕ್ ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಆತಂಕ ಪಡುವ ಅಗತ್ಯವಿಲ್ಲ: ಕರೋನಾ ವೈರಸ್ ಹರಡದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕರೋನಾ ವೈರಸ್ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಡಿಎಚ್‍ಒ ಡಾ.ರಾಜೇಶ ಸುರಗಿಹಳ್ಳಿ, ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಲೇಪಾಕ್ಷಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post