ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಲ್ಪಸಂಖ್ಯಾತ ಸಮುದಾಯದ ಅರ್ಹ ಫಲಾನುಭವಿಗಳ ಸರ್ವಾಂಗೀಣ ವಿಕಾಸಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸೌಲಭ್ಯಗಳು ವಿಶೇಷವಾಗಿ ಗ್ರಾಮೀಣ ಮಹಿಳೆಯರಿಗೆ ತಲುಪಬೇಕು. ಅವರು ಸ್ವತಂತ್ರ ಹಾಗೂ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಆಡಳಿತ ವರ್ಷದ ಕೊನೆಯ ಮಾಸ ಸಮೀಪಿಸುತ್ತಿದ್ದು, ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಅನುಷ್ಠಾನದಲ್ಲಿರುವ ಯೋಜನೆಗಳು ನಿಗಧಿತ ಗುರಿ ತಲುಪುವಂತೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ವಿದ್ಯಾರ್ಥಿವೇತನ ತಲುಪಿಸುವಂತೆ ಸೂಚಿಸಿದ ಅವರು, ಅಲ್ಪಸಂಖ್ಯಾತ ಸಮುದಾಯ ಹೆಚ್ಚಿನ ಸಂಖ್ಯೆಯ ಮಕ್ಕಳಿರುವ ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ವಿತರಣೆ ಮಾಡುವ ಬಗ್ಗೆಯೂ ಅಧಿಕಾರಿಗಳು ಗಮನಹರಿಸುವಂತೆ ಅವರು ಸೂಚಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತ ಫಲಾನುಭವಿಗಳ ಹೊಲಗಳಲ್ಲಿ ಕೆಲವು ವರ್ಷಗಳ ಹಿಂದೆಯೇ ಕೊರೆಸಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸುವಂತೆ ಹಾಗೂ ಶಿಕ್ಷಣ ಕೇತ್ರದಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಅವಕಾಶಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸ್ವಯಂ ಉದ್ಯೋಗ ಹಾಗೂ ಅಗತ್ಯಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಕಾಲದಲ್ಲಿ ಸಾಲ ಸೌಲಭ್ಯ ದೊರಕಿಸಿಕೊಡುವಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರು ಗಮನಹರಿಸುವಂತೆ ಹಾಗೂ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅವರು ಪೊಲೀಸ್ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಧರ್ಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ. ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post