ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕಾಗಿ ಈ ವರ್ಷ 2 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.
ಮಾರ್ಚ್ ತಿಂಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಡಾ ಬೀದರ್ ಅಥವಾ ಉತ್ತರ ಕರ್ನಾಟಕ ಭಾಗದಲ್ಲಿ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಪ್ರತೀ ವರ್ಷ ಮುಖ್ಯಮಂತ್ರಿಗಳು ಈ ಕ್ರೀಡಾಕೂಟಕ್ಕೆ 1 ಕೋಟಿ ರೂ. ಅನುದಾನ ನೀಡುತ್ತಿದ್ದರು. ಈ ಬಾರಿ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಅಲ್ಲದೆ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಈ ಹಿಂದೆ ಕ್ರೀಡಾ ಮತ್ತು ಯುವಜನ ಖಾತೆ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪನವರು 50 ಸಾವಿರದಿಂದ ಒಂದೂವರೆ ಲಕ್ಷಕ್ಕೆ ಅನುದಾನ ಹೆಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸರ್ಕಾರಿ ನೌಕರರ ಸಂಘಕ್ಕೆ ನೂರು ವರ್ಷಗಳು ತುಂಬಿದ್ದು, ಈ ಹಿನ್ನೆಲೆಯಲ್ಲಿ ಇದರ ನೆನಪಿನಲ್ಲಿ ಸಮುದಾಯ ಭವನವನ್ನು ನಿರ್ಮಿಸಲು 10 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಶತದಿನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುವುದು. 2022-23ರ ಸಾಲಿನಲ್ಲಿ ಕೇಂದ್ರ ಮಾದರಿಯ ವೇತನವನ್ನು ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪಡೆದೇ ಪಡೆಯುತ್ತೇವೆ ಎಂದು ಘೋಷಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post