ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿಶೇಷ ಕ್ರೀಡಾ ವಲಯ (ಎಸ್‌ಎಜಿ)ಯೋಜನೆಯಡಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಹಾಗೂ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಫೆಬ್ರವರಿ 21ರಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಶಿವಮೊಗ್ಗ ಆಗಮಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಅವರು ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಶೇಷ ಕ್ರೀಡಾ ವಲಯ ಯೋಜನೆಯಿಂದ ಕೇವಲ ಜಿಲ್ಲೆ ಮಾತ್ರವಲ್ಲದೆ ನೆರೆಯ ಜಿಲ್ಲೆಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ವೃತ್ತಿಪರ ತರಬೇತಿ ನೀಡುವುದು ಸಾಧ್ಯವಾಗಲಿದೆ. ಇದೊಂದು ಅತ್ಯುತ್ತಮ ತರಬೇತಿ ಕೇಂದ್ರವಾಗಲಿದ್ದು, ಇಡೀ ರಾಜ್ಯದ ಆಸ್ತಿಯಾಗಲಿದೆ. ಸಚಿವರ ಭೇಟಿಯ ಪೂರ್ವಭಾವಿಯಾಗಿ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಫೆ.18ರಂದು ಜಿಲ್ಲೆಗೆ ಆಗಮಿಸಿ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಿದರು.
ವಿಶೇಷ ಕ್ರೀಡಾ ವಲಯ ಸ್ಥಾಪನೆಗೆ ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 50ಎಕರೆ ಪ್ರದೇಶ, ಲಯನ್ ಸಫಾರಿ ಎದುರು 50ಎಕರೆ ಪ್ರದೇಶ ಮತ್ತು ಪಶುವೈದ್ಯಕೀಯ ಕಾಲೇಜು ಆವರಣದಲ್ಲಿರುವ ೨೫ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅಂತಿಮಗೊಳಿಸಲಿದ್ದಾರೆ ಎಂದರು.
ಫೆ.21ರಂದು ಕೇಂದ್ರ ಕ್ರೀಡಾ ಸಚಿವರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ 4ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ಮತ್ತು ಸಹ್ಯಾದ್ರಿ ಕಾಲೇಜಿನಲ್ಲಿ 4ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದರು.
ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ:
ಜಿಲ್ಲೆಯಲ್ಲಿರುವ ಪಶು ವೈದ್ಯಕೀಯ ಕಾಲೇಜನ್ನು ಪಶು ವೈದ್ಯಕೀಯ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಈ ಕುರಿತು ಘೋಷಿಸಲು ಕೋರಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post