ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ದೈಹಿಕ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪಾಲಕರು, ಪೋಷಕರು ಇಂದು ಶಾಲೆಯ ಎದುರು ಪ್ರತಿಭಟನೆ ನಡೆಸಿದರು.
ಈ ಶಾಲೆಯಲ್ಲಿ ಸುಮಾರು 970 ವಿದ್ಯಾರ್ಥಿಗಳಿದ್ದು ಕಳೆದ ಒಂದೂವರೆ ವರ್ಷಗಳಿಂದ ಈ ಶಾಲೆಯಲ್ಲಿ ದೈಹಿಕ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ಕ್ರೀಡಾ, ದೈಹಿಕ ಚಟುವಟಿಕೆಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯಿಂದ ವಂಚಿತರಾಗಿದ್ದಾರೆ. ಸ್ಥಳೀಯ ಬಿಇಓ, ಡಿಡಿಪಿಐ ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಅವರ ಗಮನಕ್ಕೆ ತಂದರೂ ಇಲ್ಲಿಯವರೆಗೂ ದೈಹಿಕಶಿಕ್ಷಕರ ನೇಮಕಾತಿಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಆದರೆ ಕಳೆದ ಒಂದೂವರೆ ವರ್ಷಗಳಿಂದ ಇದೇ ರೀತಿಯ ನೆಪ ಹೇಳಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದ್ದು, ಕೂಡಲೇ ದೈಹಿಕ ಶಿಕ್ಷಕರನ್ನು ನೇಮಕಾತಿ ಮಾಡುವವರೆಗೆ ನಾವು ಜಾಗಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಎಸ್‍ಡಿಎಂಸಿ ಸದಸ್ಯರೂ ಕೂಡ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ 2000ಕ್ಕೂ ಹೆಚ್ಚು ಶಾಲೆಗಳಿದ್ದು ಕೇವಲ 160 ದೈಹಿಕ ಶಿಕ್ಷಕರಿರುವುದು ಶಿಕ್ಷಣ ಇಲಾಖೆಯ ದೊಡ್ಡ ದುರಂತವಾಗಿದೆ. ಕೆಪಿಎಸ್ ಶಾಲೆಗಳನ್ನು ಮಾಡುವ ಮೊದಲು ದೈಹಿಕ ಶಿಕ್ಷಕರ ಕೊರತೆಯನ್ನು ಮೊದಲು ನೀಗಿಸಲಿ ಎನ್ನುವುದು ಪೋಷಕರ ಒತ್ತಾಯವಾಗಿದೆ.
ಪ್ರತಿಭಟನೆಯಲ್ಲಿ ಎಸ್‍ಡಿಎಂಸಿಯ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ವನಿತಾ, ಪ್ರಮುಖರಾದ ಸುಚಿತಾ, ಸಂಗೀತ, ರಮ್ಯ, ಕಮಲಾ, ಉಮೇಶ, ಅನ್ನಪೂರ್ಣ, ಚೈತ್ರ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post