ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳನ್ನು ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡು ಆರಂಭದ ಹಂತವಾಗಿ ಶಾಲೆಗಳ ಶೌಚಾಲಯ, ಕಾಂಪೌಂಡ್ ಹಾಗೂ ಆಟದ ಮೈದಾನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಅವರು ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು ಈಗಾಗಲೇ 14ಕೋಟಿ ಮಾನವದಿನಗಳ ನೆರವನ್ನು ಒದಗಿಸಿದೆ. ಅಲ್ಲದೇ ಹೆಚ್ಚುವರಿಯಾಗಿ 800ಕೋಟಿ ರೂ.ಗಳ ಆರ್ಥಿಕ ನೆರವನ್ನು ನೀಡಿದೆ ಎಂದ ಅವರು, ಈ ಯೋಜನೆಯ ಶಾಲೆಗೆ ಸಂಬಂಧಿಸಿದ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಕ್ರಿಯಾಯೋಜನೆಯನ್ನು ತಯಾರಿಸಿ, ತ್ವರಿತವಾಗಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಿಕೊಡುವಂತೆ ಸೂಚಿಸಿರು.
ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಶಿಕ್ಷಕರ ಗುರುಭವನ ನಿರ್ಮಾಣಕ್ಕೆ ಈಗಾಗಲೇ 2ಕೋಟಿ ರೂ.ಗಳ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದು, ಹೆಚ್ಚುವರಿಯಾಗಿ ಅಗತ್ಯವಾಗಿರುವ 1ಕೋಟಿ ರೂ.ಗಳನ್ನು ತಾವು ಮಂಜೂರು ಮಾಡುವುದಾಗಿ ಘೋಷಿಸಿದರು.
ಶಿಕ್ಷಣ ಇಲಾಖೆ ಸೇವಾ ದೃಷ್ಠಿಯಿಂದ ಪವಿತ್ರವೆನಿಸಿದೆ. ಶಿಕ್ಷಕರು ಕೂಡ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ನಗರದ ಎಲ್ಲಾ ಶಾಲೆಗಳನ್ನು ಸರ್ಕಾರದ ನೆರವು ಹಾಗೂ ಸ್ಥಳೀಯ ದಾನಿಗಳ ನೆರವಿನಿಂದ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಲಾಗಿದೆ. ಈ ಕಾರ್ಯಕ್ಕೆ ಪ್ರಧಾನ ಮಂತ್ರಿಗಳು ಶ್ಲಾಘಿಸಿದ್ದಾರೆ ಎಂದರು.
ನಗರದ ಶಾಲೆಗಳಂತೆಯೇ ರಾಜ್ಯದ ಎಲ್ಲಾ ಗ್ರಾಮೀಣ ಶಾಲೆಗಳನ್ನು ಅಭಿವೃದ್ಧಿಪಡಿಸುವ ಆಶಯ ತಮಗಿರುವುದಾಗಿ ತಿಳಿಸಿದ ಅವರು, ಅದಕ್ಕಾಗಿ ದಾನಿಗಳ ಹಾಗೂ ಸರ್ಕಾರದ ನೆರವನ್ನು ಯಾಚಿಸಲಾಗುವುದು. ಈ ಸಂಬಂಧ ರಾಜ್ಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಲಾಗುವುದು ಎಂದು ಹೇಳಿದರು.
ಕೋರೋನ ಸೋಂಕಿನಂತಹ ಸಂಕಷ್ಟದ ಸಂದರ್ಭದಲ್ಲಿ ನೌಕರರು ಮತ್ತು ಸರ್ಕಾರದ ನಡುವಿನ ಹೊಂದಾಣಿಕೆಯಿಂದಾಗಿ ಸಮಸ್ಯೆಗಳನ್ನು ಸರಳವಾಗಿ ನಿರ್ವಹಿಸಲು ಸಹಕಾರಿಯಾಯಿತು ಮಾತ್ರವಲ್ಲ ಆಡಳಿತ ಯಂತ್ರ ಸುಗಮವಾಗಿ ಸಾಗಿತು ಎಂದ ಅವರು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೇಮಗಳೂರು ಕಣ್ಣನ್ ಅವರು ಪ್ರಾಥಮಿಕ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣದ ಮಹತ್ವ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ, ನೌಕರರ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಕಾರ್ಯದರ್ಶಿ ಐ.ಪಿ.ಶಾಂತರಾಜ್ ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post